ರಾಯಚೂರು, ನ. 5: ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಕೇವಲ ಪದವಿ ಶಿಕ್ಷಣ ಪಡೆದರೆ ಸಾಲದು. ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ವೃತ್ತಿಪರ ಕೌಶಲ್ಯ, ಹಣಕಾಸು ಜ್ಞಾನ ಹಾಗೂ ಮಾನ್ಯತೆ ಪಡೆದ ವೃತ್ತಿಪರ ಪ್ರಮಾಣಪತ್ರಗಳನ್ನು ಹೊಂದುವುದು ಅಗತ್ಯವಾಗಿದೆ ಎಂದು ಕಿಶ್ಕಿಂದ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಾವಿತ್ರಿ ಎಂ. ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪದವಿಯಾಚೆಗೆ: ಬ್ಯಾಂಕಿಂಗ್ ವೃತ್ತಿ ಅವಕಾಶಗಳು, ಹಣಕಾಸು ಕೌಶಲ್ಯಗಳು ಮತ್ತು ವೃತ್ತಿಪರ ಪ್ರಮಾಣಪತ್ರಗಳು’ (Beyond the Degree: Banking Careers, Financial Skills and Professional Certifications) ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

ಪದವಿ ಶಿಕ್ಷಣವು ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಭದ್ರ ಬುನಾದಿ ಒದಗಿಸುತ್ತದೆ. ಆದರೆ ನಿರಂತರವಾಗಿ ಬದಲಾಗುತ್ತಿರುವ ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಬ್ಯಾಂಕಿಂಗ್ ಕ್ಷೇತ್ರವೆಂದರೆ ಕೇವಲ ಬ್ಯಾಂಕ್ ಕ್ಲರ್ಕ್ ಅಥವಾ ಅಧಿಕಾರಿ ಹುದ್ದೆಗಳಿಗೆ ಸೀಮಿತವಾಗಿಲ್ಲ. ಹಣಕಾಸು ವಿಶ್ಲೇಷಣೆ, ಸಾಲ ನಿರ್ವಹಣೆ, ಹೂಡಿಕೆ ಮತ್ತು ಸಂಪತ್ತು ನಿರ್ವಹಣೆ, ಡಿಜಿಟಲ್ ಬ್ಯಾಂಕಿಂಗ್, ಅಪಾಯ ನಿರ್ವಹಣೆ, ವಿಮೆ, ಹಣಕಾಸು ತಂತ್ರಜ್ಞಾನ (ಫಿನ್‌ಟೆಕ್) ಹಾಗೂ ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕ ಉದ್ಯೋಗಾವಕಾಶಗಳಿವೆ ಎಂದು ವಿವರಿಸಿದರು.

ವಿದ್ಯಾರ್ಥಿಗಳು ಪದವಿ ಹಂತದಲ್ಲಿಯೇ ತಮ್ಮ ಆಸಕ್ತಿ ಹಾಗೂ ಸಾಮರ್ಥ್ಯಕ್ಕೆ ಅನುಗುಣವಾಗಿ ವೃತ್ತಿಜೀವನದ ಗುರಿಗಳನ್ನು ನಿರ್ಧರಿಸಿಕೊಳ್ಳಬೇಕು. ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿನ ಹೊಸ ಬೆಳವಣಿಗೆಗಳನ್ನು ನಿರಂತರವಾಗಿ ಅಧ್ಯಯನ ಮಾಡುವುದರೊಂದಿಗೆ ಪ್ರಾಯೋಗಿಕ ಜ್ಞಾನ, ತಾಂತ್ರಿಕ ಕೌಶಲ್ಯ ಮತ್ತು ವೃತ್ತಿಪರ ಅರ್ಹತೆಗಳನ್ನು ಗಳಿಸಿಕೊಳ್ಳಬೇಕು. ಇದರಿಂದ ಉದ್ಯೋಗಾವಕಾಶಗಳನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ವೃತ್ತಿಜೀವನದಲ್ಲಿ ಉನ್ನತ ಸ್ಥಾನಗಳನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣ ಬಸವರಾಜ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನದೊಂದಿಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ವೃದ್ಧಿಸುವಲ್ಲಿ ಇಂತಹ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಸಂವಹನ ಕೌಶಲ್ಯ, ತಂಡದೊಂದಿಗೆ ಕೆಲಸ ಮಾಡುವ ಸಾಮರ್ಥ್ಯ, ಸಮಸ್ಯೆಗಳನ್ನು ಪರಿಹರಿಸುವ ಮನೋಭಾವ, ಡಿಜಿಟಲ್ ಸಾಕ್ಷರತೆ, ವಿಶ್ಲೇಷಣಾತ್ಮಕ ಚಿಂತನೆ ಹಾಗೂ ಗ್ರಾಹಕರೊಂದಿಗೆ ಪರಿಣಾಮಕಾರಿಯಾಗಿ ವ್ಯವಹರಿಸುವ ಕೌಶಲ್ಯಗಳು ಅತ್ಯಂತ ಅಗತ್ಯವಾಗಿವೆ ಎಂದು ತಿಳಿಸಿದರು.

ವಿಶೇಷವಾಗಿ ಡಿಜಿಟಲ್ ಬ್ಯಾಂಕಿಂಗ್ ಮತ್ತು ಹಣಕಾಸು ತಂತ್ರಜ್ಞಾನ ಕ್ಷೇತ್ರಗಳು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳನ್ನು ಕಲಿಯಲು ಆಸಕ್ತಿ ಬೆಳೆಸಿಕೊಳ್ಳಬೇಕು. ಶಿಕ್ಷಣದೊಂದಿಗೆ ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿದಾಗ ಮಾತ್ರ ಭವಿಷ್ಯದ ಉದ್ಯೋಗ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿನಿಯರು ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಂಡು ಆತ್ಮವಿಶ್ವಾಸದಿಂದ ವೃತ್ತಿಜೀವನ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕಿ ಡಾ. ಜ್ಯೋತಿ ಸಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿನಿಯರಿಗೆ ಪಠ್ಯಾಧಾರಿತ ಶಿಕ್ಷಣದ ಜೊತೆಗೆ ವಿವಿಧ ವೃತ್ತಿ ಕ್ಷೇತ್ರಗಳ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಉದ್ದೇಶದಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಸ್ವರೂಪರಾಣಿ ಸಂಪನ್ಮೂಲ ವ್ಯಕ್ತಿ ಸಾವಿತ್ರಿ ಎಂ. ಅವರನ್ನು ಪರಿಚಯಿಸಿದರು.

ಈ ಸಂದರ್ಭದಲ್ಲಿ ರಾಯಚೂರಿನ ಎಲ್‌ವಿಡಿ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಶಾನುಕುಮಾರ್, ಐಕ್ಯೂಎಸಿ ಸಹ ಸಂಚಾಲಕ ಡಾ. ಶರಣಗೌಡ ಕೆ., ಡಾ. ಉಮಾದೇವಿ ಹಾಗೂ ಶ್ರೀಮತಿ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಹ ಪ್ರಾಧ್ಯಾಪಕರಾದ ಡಾ. ಸೈಯಿದಾ ರಷೀದಾ ಪರ್ವೀನ್, ಸುಮಿತ್ರಾ ಪ್ಯಾಟಿ, ಸಹಾಯಕ ಪ್ರಾಧ್ಯಾಪಕರಾದ ರಂಗನಾಥ ಬಿಲ್ಲಾರ್, ಡಾ. ಸಂತೋಷಕುಮಾರ, ಡಾ. ಚನ್ನಬಸವ, ಡಾ. ಅಸ್ಮಾ, ಡಾ. ಪ್ರಸನ್ನಕುಮಾರ, ಡಾ. ಸುರೇಶ ಪಾಟೀಲ್ ಸೇರಿದಂತೆ ಕಾಲೇಜಿನ ಅತಿಥಿ ಉಪನ್ಯಾಸಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಸಂಗೀತಾ ಪ್ರಾರ್ಥಿಸಿದರು. ಉಪನ್ಯಾಸಕಿ ಡಾ. ಪ್ರಿಯಾಂಕ ಸ್ವಾಗತಿಸಿದರು. ವಿದ್ಯಾರ್ಥಿನಿ ಸುಚಿತ್ರಾ ನಿರೂಪಿಸಿದರು. ಉಪನ್ಯಾಸಕ ಅಮರೇಶ ವಂದಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿ ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿನ ವೃತ್ತಿ ಅವಕಾಶಗಳ ಕುರಿತು ಮಾಹಿತಿ ಪಡೆದುಕೊಂಡರು.