ಮಂತ್ರಾಲಯ, ನ. 5: ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಮಂಡಲ ಪ್ರಾದೇಶಿಕ ಕ್ಷೇತ್ರ (ಎಂಪಿಟಿಸಿ) ಹಾಗೂ ಜಿಲ್ಲಾ ಪ್ರಾದೇಶಿಕ ಕ್ಷೇತ್ರ (ಜೆಡ್ಪಿಟಿಸಿ) ಚುನಾವಣೆಗಳ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ಗುರುವಾರ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

ಮಂತ್ರಾಲಯದ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಗೆ ಆಗಮಿಸಿದ ಶ್ರೀಗಳು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಹಕ್ಕನ್ನು ಚಲಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಮತದಾನವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ದೊರೆತಿರುವ ಮಹತ್ವದ ಹಕ್ಕಾಗಿದೆ. ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪ್ರತಿಯೊಬ್ಬ ಮತದಾರನ ಪಾತ್ರವೂ ಪ್ರಮುಖವಾಗಿದ್ದು, ಎಲ್ಲರೂ ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕು ಎಂದು ಕರೆ ನೀಡಿದರು.

ಚುನಾವಣೆಗಳು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭವಾಗಿದ್ದು, ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು. ಮತದಾನದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ಸಂದೇಶ ನೀಡಿದರು.

ಮತದಾನ ಪ್ರಕ್ರಿಯೆಯಲ್ಲಿ ಶ್ರೀಗಳು ಭಾಗವಹಿಸುವ ಮೂಲಕ ಸಾರ್ವಜನಿಕರಿಗೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.