ರಾಯಚೂರು, ನ. 5: ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನವೆಂಬರ್ 14 ಮತ್ತು 15ರಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿರುವ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ರಾಷ್ಟ್ರ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ರಾಮಣ್ಣ ಹವಳೆ ಅವರಿಗೆ ಸಮ್ಮೇಳನದ ಸ್ವಾಗತ ಸಮಿತಿಯ ಪದಾಧಿಕಾರಿಗಳು ಗುರುವಾರ ಅಧಿಕೃತ ಆಹ್ವಾನ ನೀಡಿದರು.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅವರ ನೇತೃತ್ವದಲ್ಲಿ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ರಾಮಣ್ಣ ಹವಳೆ ಅವರನ್ನು ಭೇಟಿಯಾಗಿ ಸಮ್ಮೇಳನದ ಅಧಿಕೃತ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಗತ ಸಮಿತಿಯ ಪದಾಧಿಕಾರಿಗಳು, ಜಿಲ್ಲೆಯ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ನಾಡಿನಾದ್ಯಂತ ಪರಿಚಯಿಸುವ ಉದ್ದೇಶದಿಂದ ಎರಡು ದಿನಗಳ ಕಾಲ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಹಿರಿಯ ಸಾಹಿತಿ ರಾಮಣ್ಣ ಹವಳೆ ಅವರು ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಜಿಲ್ಲೆಯ ಸಾಹಿತ್ಯ ವಲಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ನಾಡಿನ ಪರಂಪರೆಯ ಕುರಿತು ಚಿಂತನ-ಮಂಥನ ನಡೆಸಲು ಸಮ್ಮೇಳನ ಉತ್ತಮ ವೇದಿಕೆಯಾಗಲಿದೆ. ಹಿರಿಯ ಮತ್ತು ಯುವ ಸಾಹಿತಿಗಳು, ಕವಿಗಳು, ಚಿಂತಕರು ಹಾಗೂ ಸಾಹಿತ್ಯಾಸಕ್ತರು ಒಂದೆಡೆ ಸೇರಿ ಕನ್ನಡ ಸಾಹಿತ್ಯದ ಬೆಳವಣಿಗೆಗೆ ಪೂರಕವಾದ ವಿಚಾರಗಳನ್ನು ಹಂಚಿಕೊಳ್ಳಲು ಅವಕಾಶ ದೊರೆಯಲಿದೆ ಎಂದು ತಿಳಿಸಿದರು.

ಸಮ್ಮೇಳನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ವಿವಿಧ ಸಮಿತಿಗಳ ಮೂಲಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಿಂದ ಸಾಹಿತಿಗಳು, ಕನ್ನಡಾಭಿಮಾನಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಎ. ಪಾಪಾರೆಡ್ಡಿ, ಪ್ರಧಾನ ಕಾರ್ಯದರ್ಶಿ ರಂಗಣ್ಣ ಪಾಟೀಲ್ ಅಳ್ಳುಂಡಿ, ಕೋಶಾಧ್ಯಕ್ಷ ಜಯಣ್ಣ, ನಾಗಪ್ಪ ಹೊರಪೇಟಿ, ಸಹ ಕಾರ್ಯದರ್ಶಿ ಡಾ. ಬಿ. ವಿಜಯ ರಾಜೇಂದ್ರ, ಕರ್ನಾಟಕ ಸಂಘದ ಅಧ್ಯಕ್ಷ ಕೆ. ಶಾಂತಪ್ಪ, ಜಯಂತರಾವ್ ಪತಂಗೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ವೀರಹನುಮಾನ, ಬಾಬು ಭಂಡಾರಿಗಲ್, ಎಚ್.ಎಚ್. ಮ್ಯಾದಾರ್, ಈರಣ್ಣ ಬೆಂಗಾಲಿ, ಪ್ರತಿಭಾ ಗೋನಾಳ, ದಂಡಪ್ಪ ಬಿರಾದಾರ ಸೇರಿದಂತೆ ಹಲವು ಸಾಹಿತಿಗಳು, ಕನ್ನಡಪರ ಮುಖಂಡರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.