ರಾಯಚೂರು, ನ. 5: ರಾಜ್ಯ ಸರ್ಕಾರ ಹಾಲು ಹಾಗೂ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ, ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕೆಆರ್ಎಸ್ ಪಕ್ಷದ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ರಾಜ್ಯ ಸರ್ಕಾರ ನವೆಂಬರ್ 1ರಿಂದ ಹಾಲಿನ ದರ ಹಾಗೂ ನವೆಂಬರ್ 5ರಿಂದ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದರಿಂದ ಬಡವರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ ಎಂದು ಆರೋಪಿಸಿದರು.
ಈಗಾಗಲೇ ಅಗತ್ಯ ವಸ್ತುಗಳು, ತರಕಾರಿ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲು ಮತ್ತು ಸಾರ್ವಜನಿಕ ಸಾರಿಗೆ ದರವನ್ನು ಹೆಚ್ಚಿಸುವ ನಿರ್ಧಾರ ಜನರ ಜೀವನ ನಿರ್ವಹಣೆಯನ್ನು ಮತ್ತಷ್ಟು ದುಬಾರಿಯಾಗಿಸುತ್ತದೆ. ಸರ್ಕಾರ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ದರ ಏರಿಕೆ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು.
ರೈತರಿಗೆ ಹೆಚ್ಚಿನ ದರ ಒದಗಿಸುವ ಉದ್ದೇಶದಿಂದ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಆದರೆ ಹಾಲು ಒಕ್ಕೂಟಗಳಲ್ಲಿ ನಡೆಯುತ್ತಿರುವ ಅವ್ಯವಹಾರ ಹಾಗೂ ಅಕ್ರಮಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಮಂಡ್ಯ ಹಾಲು ಒಕ್ಕೂಟದಲ್ಲಿ ನಡೆದಿದೆ ಎನ್ನಲಾದ ಹಾಲಿನ ಕಲಬೆರಕೆ ಹಾಗೂ ನೀರು ಬೆರೆಸಿದ ಪ್ರಕರಣಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಸ್ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸಿರುವುದರಿಂದ ಪ್ರತಿನಿತ್ಯ ಉದ್ಯೋಗ, ಶಿಕ್ಷಣ, ವ್ಯಾಪಾರ ಹಾಗೂ ಇತರ ಅಗತ್ಯ ಕೆಲಸಗಳಿಗಾಗಿ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಜನರಿಗೆ ತೊಂದರೆಯಾಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಸಂಚರಿಸುವ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಣ್ಣ ವ್ಯಾಪಾರಿಗಳ ಮಾಸಿಕ ಪ್ರಯಾಣ ವೆಚ್ಚ ಹೆಚ್ಚಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರ ಆದಾಯ ಹೆಚ್ಚಿಸಿಕೊಳ್ಳಲು ಜನಸಾಮಾನ್ಯರ ಮೇಲೆ ದರ ಏರಿಕೆಯ ಹೊರೆ ಹಾಕುವ ಬದಲು ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ, ಅನಗತ್ಯ ವೆಚ್ಚ ಹಾಗೂ ಹಣಕಾಸಿನ ದುರುಪಯೋಗಕ್ಕೆ ಕಡಿವಾಣ ಹಾಕಬೇಕು. ಸಾರ್ವಜನಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸರ್ಕಾರದ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿಜಯ್ ಕುಮಾರ್ ಒತ್ತಾಯಿಸಿದರು.
ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ಹಾಲು ಒಕ್ಕೂಟಗಳಲ್ಲಿನ ಅವ್ಯವಹಾರಗಳ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಸಾರ್ವಜನಿಕರ ಆರ್ಥಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ವಸ್ತುಗಳು ಹಾಗೂ ಸಾರ್ವಜನಿಕ ಸೇವೆಗಳ ದರ ನಿಯಂತ್ರಣಕ್ಕೆ ಸರ್ಕಾರ ಆದ್ಯತೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೆಆರ್ಎಸ್ ಪಕ್ಷದ ಮುಖಂಡರಾದ ಶಂಕರಗೌಡ, ಕೃಷ್ಣ ಸುಕಲ್ಪೇಟ್, ದೇವಣ್ಣ ಪೋಲ್ದಿನ್ನಿ, ಆನಂದ್, ಸುರೇಶ್, ಶಿವರಾಜ್, ವೆಂಕಟೇಶ್, ಗಿರಿಯಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.



