ರಾಯಚೂರು: ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಹೆಸರಿನಲ್ಲಿ ಖಾಸಗೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ. ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಬದಲು ಖಾಸಗಿ ಕಂಪನಿಗಳ ಅಧೀನಕ್ಕೆ ಒಪ್ಪಿಸುವ ಪ್ರಯತ್ನವನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್) ಆಗ್ರಹಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಅಗತ್ಯ ಮೂಲಸೌಕರ್ಯ ಹಾಗೂ ವಿಷಯವಾರು ಶಿಕ್ಷಕರನ್ನು ಒದಗಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಬದಲು ಖಾಸಗಿ ಶಾಲಾ ಮಾಲೀಕರು ಹಾಗೂ ಖಾಸಗಿ ಕಂಪನಿಗಳಿಗೆ ಶಾಲೆಗಳನ್ನು ದತ್ತು ನೀಡುವ ಹೆಸರಿನಲ್ಲಿ ಖಾಸಗೀಕರಣಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಿದೆ.
ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದ್ದು, ಅದನ್ನು ವ್ಯಾಪಾರದ ಸರಕನ್ನಾಗಿ ಪರಿವರ್ತಿಸುವ ಯಾವುದೇ ಪ್ರಯತ್ನವನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳ ಅಧೀನಕ್ಕೆ ನೀಡುವುದರ ಹಿಂದಿನ ಉದ್ದೇಶವೇನು ಎಂಬುದನ್ನು ಸರ್ಕಾರ ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು. ಇಂತಹ ನಿರ್ಧಾರಗಳಿಂದ ಬಡವರು, ಮಧ್ಯಮ ವರ್ಗದವರು, ದಲಿತರು, ಶೋಷಿತರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ಶೈಕ್ಷಣಿಕ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದೆ.
ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಶಿಕ್ಷಣದ ಪ್ರಮುಖ ಆಧಾರವಾಗಿವೆ. ಇಂತಹ ಶಾಲೆಗಳ ನಿರ್ವಹಣೆ ಮತ್ತು ಅಭಿವೃದ್ಧಿಯ ಜವಾಬ್ದಾರಿಯಿಂದ ಸರ್ಕಾರ ಹಿಂದೆ ಸರಿಯಬಾರದು. ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವ ಹಾಗೂ ಶೈಕ್ಷಣಿಕ ಗುಣಮಟ್ಟಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಒತ್ತಾಯಿಸಿದೆ.
ಖಾಸಗಿ ಕಂಪನಿಗಳಿಂದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅನುದಾನವನ್ನು ಪಡೆದು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಿಕೊಳ್ಳಲು ಅವಕಾಶವಿದೆ. ಈ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಶಾಲಾ ಕಟ್ಟಡಗಳು, ಪ್ರಯೋಗಾಲಯಗಳು, ಗ್ರಂಥಾಲಯಗಳು, ಶೌಚಾಲಯಗಳು, ಕುಡಿಯುವ ನೀರು ಹಾಗೂ ಇತರ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬಹುದು. ಇದಕ್ಕಾಗಿ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳ ಅಧೀನಕ್ಕೆ ಒಪ್ಪಿಸುವ ಅಗತ್ಯವೇನಿದೆ ಎಂದು ಸಂಘಟನೆ ಪ್ರಶ್ನಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಪ್ರತಿಯೊಂದು ವಿಷಯಕ್ಕೂ ಅರ್ಹ ಶಿಕ್ಷಕರನ್ನು ನೇಮಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ಆಗ್ರಹಿಸಿದೆ.
ಶಿಕ್ಷಣವು ಲಾಭ ಗಳಿಸುವ ಉದ್ಯಮವಲ್ಲ. ಅದು ಸಮಾಜದ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಭವಿಷ್ಯದ ಪೀಳಿಗೆಯ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದೆ. ಎಲ್ಲ ವರ್ಗದ ಮಕ್ಕಳಿಗೂ ಸಮಾನ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯಾವುದೇ ನೀತಿಯನ್ನು ಜಾರಿಗೊಳಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಯೋಜನೆಯನ್ನು ಸರ್ಕಾರ ತಕ್ಷಣ ಮರುಪರಿಶೀಲಿಸಿ ಕೈಬಿಡಬೇಕು. ಶಾಲೆಗಳ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ವಿಷಯವಾರು ಶಿಕ್ಷಕರ ನೇಮಕಾತಿ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರನ್ನು ಸಂಘಟಿಸಿ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಎಚ್ಚರಿಸಿದೆ.



