ಮಾನ್ವಿ, ನ. 5: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿನ ಅಸಮಾನತೆ, ಅಸ್ಪೃಶ್ಯತೆ ಹಾಗೂ ಶೋಷಣೆಯ ವಿರುದ್ಧ ನಿರಂತರ ಹೋರಾಟ ನಡೆಸಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಮಾನವತಾವಾದಿ ಹಾಗೂ ಮನುಕುಲದ ಒಳಿತಿಗಾಗಿ ದುಡಿದ ಆದರ್ಶ ನೇತಾರರಾಗಿದ್ದಾರೆ ಎಂದು ಉಪನ್ಯಾಸಕ ದುರ್ಗಪ್ಪ ಅಮರಾವತಿ ಹೇಳಿದರು.
ಪಟ್ಟಣದ ಕಲ್ಮಠ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಡಾ. ಬಿ.ಆರ್. ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ‘ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಗ್ರ ಬದುಕು ಮತ್ತು ಹೋರಾಟ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಅಂಬೇಡ್ಕರ್ ಅವರ ಜೀವನ, ಸಾಧನೆ ಹಾಗೂ ಚಿಂತನೆಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿದಾಯಕವಾಗಿವೆ ಎಂದು ತಿಳಿಸಿದರು.
ಡಾ. ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಸಮಾಜದಲ್ಲಿನ ಅಜ್ಞಾನ, ಅಸಮಾನತೆ ಹಾಗೂ ಶೋಷಣೆಯನ್ನು ಹೋಗಲಾಡಿಸಲು ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದೆ ಎಂಬುದನ್ನು ಪ್ರತಿಪಾದಿಸಿದ್ದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಅವರ ಜೀವನ ಚರಿತ್ರೆ, ಹೋರಾಟದ ಹಾದಿ, ಸಾಹಿತ್ಯ ಹಾಗೂ ಸಾಮಾಜಿಕ ಚಿಂತನೆಗಳನ್ನು ಅಧ್ಯಯನ ಮಾಡುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವದ ಮೌಲ್ಯಗಳು ಭಾರತೀಯ ಸಂವಿಧಾನದ ಪ್ರಮುಖ ಆಶಯಗಳಾಗಿವೆ. ಈ ಮೌಲ್ಯಗಳನ್ನು ಕೇವಲ ಪುಸ್ತಕಗಳಿಗೆ ಸೀಮಿತಗೊಳಿಸದೆ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾತಿ, ಧರ್ಮ, ಭಾಷೆ ಹಾಗೂ ವರ್ಗಭೇದಗಳನ್ನು ಮೀರಿ ಎಲ್ಲರೂ ಸಹೋದರತ್ವದ ಭಾವನೆಯೊಂದಿಗೆ ಬದುಕಿದಾಗ ಮಾತ್ರ ಅಂಬೇಡ್ಕರ್ ಅವರ ಸಮಸಮಾಜದ ಕನಸು ನನಸಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
‘ಶಿಕ್ಷಣ ಪಡೆಯಿರಿ, ಸಂಘಟಿತರಾಗಿ, ಹೋರಾಡಿರಿ’ ಎಂಬ ಅಂಬೇಡ್ಕರ್ ಅವರ ಸಂದೇಶವನ್ನು ವಿದ್ಯಾರ್ಥಿಗಳು ಜೀವನದ ಮಾರ್ಗದರ್ಶಕ ತತ್ವವನ್ನಾಗಿ ಸ್ವೀಕರಿಸಬೇಕು. ನಿರಂತರ ಅಧ್ಯಯನ, ವೈಚಾರಿಕ ಚಿಂತನೆ, ಶಿಸ್ತು ಹಾಗೂ ಪರಿಶ್ರಮದ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಜೊತೆಗೆ ಸಮಾಜದ ಅಭಿವೃದ್ಧಿಗೂ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆ, ಸಂವಿಧಾನದ ಆಶಯಗಳು ಹಾಗೂ ಸಾಮಾಜಿಕ ನ್ಯಾಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಿಧ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ವಿಶೇಷವಾಗಿ ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಮಹನೀಯರ ಜೀವನಾದರ್ಶಗಳನ್ನು ಪರಿಚಯಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪಂಪಾ ವಿರೂಪಾಕ್ಷೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಪಾಟೀಲ ವಹಿಸಿದ್ದರು. ಹಿರಿಯ ಸಾಹಿತಿ ರಮೇಶಬಾಬು ಯಾಳಗಿ ಹಾಗೂ ಕಲ್ಮಠ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಸಿದ್ದನಗೌಡ ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ರಾಯಚೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಸಂಚಾಲಕ ಚನ್ನಬಸಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಬೇಡ್ಕರ್ ಅವರ ಚಿಂತನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸಂಗೀತ (ತಂದೆ ವೀರೇಶ್) ಪ್ರಥಮ ಸ್ಥಾನ, ಪದ್ಮಾವತಿ (ತಂದೆ ವೆಂಕೋಬ) ದ್ವಿತೀಯ ಸ್ಥಾನ ಹಾಗೂ ವೈಷ್ಣವಿ (ತಂದೆ ತಿಮ್ಮಪ್ಪ) ತೃತೀಯ ಸ್ಥಾನ ಪಡೆದರು. ವಿಜೇತ ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ಹಾಗೂ ಪುಸ್ತಕಗಳನ್ನು ಬಹುಮಾನವಾಗಿ ನೀಡಿ ಗೌರವಿಸಲಾಯಿತು.
ಉಪನ್ಯಾಸಕ ಮಲ್ಲಿಕಾರ್ಜುನ ಬ್ಯಾಗವಾಟ ಸ್ವಾಗತಿಸಿದರು. ಉಪನ್ಯಾಸಕ ಆನಂದಕುಮಾರ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



