ಸಿರವಾರ, ನ.5: ಕನ್ನಡ ಭಾಷೆಯು ಎರಡು ಸಾವಿರ ವರ್ಷಗಳಿಗೂ ಅಧಿಕ ಐತಿಹಾಸಿಕ ಪರಂಪರೆಯನ್ನು ಹೊಂದಿದ್ದು, ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವ ಕನ್ನಡ ಸಾಹಿತ್ಯವು ದೇಶದ ಶ್ರೀಮಂತ ಸಾಹಿತ್ಯ ಪರಂಪರೆಗಳಲ್ಲಿ ಒಂದಾಗಿದೆ ಎಂದು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ ಸಾಹುಕಾರ್ ಹೇಳಿದರು.

ತಾಲೂಕಿನ ತಮ್ಮ ಸ್ವಗ್ರಾಮ ಬಲ್ಲಟಗಿಯ ಶ್ರೀ ಬಸವೇಶ್ವರ ಪ್ರಾಥಮಿಕ ಹಾಗೂ ಪ್ರೌಢ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕನ್ನಡವು ಭಾರತದ ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು, ತನ್ನದೇ ಆದ ವಿಶಿಷ್ಟ ಭಾಷಾ ಪರಂಪರೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಇತಿಹಾಸವನ್ನು ಹೊಂದಿದೆ. ಕನ್ನಡ ಭಾಷೆಯ ಶ್ರೀಮಂತಿಕೆಗೆ ನಾಡಿನ ಸಾಹಿತಿಗಳು, ಕವಿಗಳು, ಚಿಂತಕರು ಹಾಗೂ ಕನ್ನಡಪರ ಹೋರಾಟಗಾರರ ಕೊಡುಗೆ ಅಪಾರವಾಗಿದೆ. ಕನ್ನಡ ನಾಡಿನ ಭಾಷಾ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ತಿಳಿಸಿದರು.

ಕರ್ನಾಟಕ ಏಕೀಕರಣ ಚಳವಳಿಯ ಇತಿಹಾಸವನ್ನು ಸ್ಮರಿಸಿದ ಶಾಸಕರು, ಆಲೂರು ವೆಂಕಟರಾವ್ ಅವರು 1905ರಲ್ಲಿಯೇ ಕರ್ನಾಟಕ ಏಕೀಕರಣದ ಆಶಯವನ್ನು ಜನರಲ್ಲಿ ಮೂಡಿಸುವ ಮೂಲಕ ಕನ್ನಡಿಗರಲ್ಲಿ ನಾಡು-ನುಡಿಯ ಪ್ರಜ್ಞೆಯನ್ನು ಜಾಗೃತಗೊಳಿಸಲು ಶ್ರಮಿಸಿದರು. ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸುವ ದೀರ್ಘಕಾಲದ ಹೋರಾಟದ ಫಲವಾಗಿ 1956ರಲ್ಲಿ ಮೈಸೂರು ರಾಜ್ಯ ರಚನೆಯಾಯಿತು. ನಂತರ 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ರಾಜ್ಯಕ್ಕೆ ಕರ್ನಾಟಕ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲಾಯಿತು ಎಂದು ವಿವರಿಸಿದರು.

ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಅಧ್ಯಯನದೊಂದಿಗೆ ಕನ್ನಡ ಭಾಷೆಯ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡಿನ ಮಹನೀಯರ ಸಾಧನೆಗಳನ್ನು ತಿಳಿದುಕೊಳ್ಳಬೇಕು. ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಅದರ ಉಳಿವು ಮತ್ತು ಬೆಳವಣಿಗೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ರಾಜ್ಯೋತ್ಸವದ ಅಂಗವಾಗಿ ಶಾಲಾ ಆವರಣದಿಂದ ಆರಂಭವಾದ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ ಗ್ರಾಮದ ವಾಲ್ಮೀಕಿ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳು ಹಾಗೂ ಬೀದಿಗಳ ಮೂಲಕ ಸಂಚರಿಸಿ ಮರಳಿ ಶಾಲಾ ಆವರಣಕ್ಕೆ ಆಗಮಿಸಿ ಮುಕ್ತಾಯಗೊಂಡಿತು.

ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ವೇಷಭೂಷಣಗಳನ್ನು ಧರಿಸಿ ಭಾಗವಹಿಸುವ ಮೂಲಕ ಕನ್ನಡ ನಾಡಿನ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯಿಂದ ಗ್ರಾಮದಲ್ಲಿ ರಾಜ್ಯೋತ್ಸವದ ಸಂಭ್ರಮ ಮನೆಮಾಡಿತ್ತು.

ಈ ಸಂದರ್ಭದಲ್ಲಿ ಪಿ. ಶಂಕರಗೌಡ, ಮಲ್ಲಿಕಾರ್ಜುನ ಪಾಟೀಲ್, ವೆಂಕನಗೌಡ, ಶಾಲೆಯ ಅಧ್ಯಕ್ಷ ಪಿ. ಚಂದ್ರಶೇಖರ, ಆರ್. ಶರಣಗೌಡ, ಶಿವಶರಣಗೌಡ, ಮುದಪ್ಪ ಸಾಹುಕಾರ್, ಬಸವಗೌಡ ಕೊಡೆಕಲ್, ಪಿ. ಬಸವಗೌಡ ಸೇರಿದಂತೆ ಗ್ರಾಮದ ಮುಖಂಡರು, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.