ಮಟಮಾರಿ, ನ.5: ಆರೋಗ್ಯಕರ ಜೀವನ ನಡೆಸಲು ಸಮತೋಲಿತ ಪೌಷ್ಟಿಕ ಆಹಾರ ಸೇವನೆ, ವೈಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಪೌಷ್ಟಿಕ ಆಹಾರ ಹಾಗೂ ಸಕಾಲಿಕ ಲಸಿಕಾಕರಣ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ್ ಕುಮಾರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಹಾಗೂ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಟಮಾರಿಯ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಆಯೋಜಿಸಿದ್ದ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಉತ್ತಮ ಆರೋಗ್ಯ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಪೌಷ್ಟಿಕ ಆಹಾರ ಸೇವನೆಯೊಂದಿಗೆ ಶುದ್ಧ ಕುಡಿಯುವ ನೀರಿನ ಬಳಕೆ, ಕೈಗಳ ಸ್ವಚ್ಛತೆ, ಮನೆಯ ಸುತ್ತಮುತ್ತಲಿನ ಪರಿಸರ ನೈರ್ಮಲ್ಯ ಹಾಗೂ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದರಿಂದ ಅನೇಕ ಕಾಯಿಲೆಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಗರ್ಭಾವಸ್ಥೆಯಲ್ಲಿ ಮಹಿಳೆಯರು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದರಿಂದ ತಾಯಿಯ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಗರ್ಭದಲ್ಲಿರುವ ಮಗುವಿನ ಬೆಳವಣಿಗೆಗೂ ಸಹಕಾರಿಯಾಗುತ್ತದೆ. ಬಾಣಂತಿಯರು ಸಮತೋಲಿತ ಆಹಾರ ಸೇವಿಸುವುದರಿಂದ ಹೆರಿಗೆಯ ನಂತರ ದೈಹಿಕ ಚೇತರಿಕೆ ಹೊಂದಲು ಹಾಗೂ ಮಗುವಿಗೆ ಎದೆಹಾಲುಣಿಸಲು ಅನುಕೂಲವಾಗುತ್ತದೆ. ಹೀಗಾಗಿ ಗರ್ಭಿಣಿಯರು ಮತ್ತು ಬಾಣಂತಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಲಸಿಕಾಕರಣ ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ನಿಗದಿತ ಲಸಿಕಾ ವೇಳಾಪಟ್ಟಿಯಂತೆ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ಲಸಿಕೆಗಳಿಂದ 12 ಮಾರಕ ರೋಗಗಳ ವಿರುದ್ಧ ಮಕ್ಕಳಿಗೆ ರಕ್ಷಣೆ ಒದಗಿಸಬಹುದು. ಸಕಾಲದಲ್ಲಿ ಲಸಿಕೆ ಹಾಕಿಸುವುದರಿಂದ ತಡೆಗಟ್ಟಬಹುದಾದ ರೋಗಗಳ ಅಪಾಯವನ್ನು ಕಡಿಮೆ ಮಾಡಿ ಶಿಶು ಮರಣ ಪ್ರಮಾಣ ತಗ್ಗಿಸಲು ಸಾಧ್ಯವಾಗುತ್ತದೆ. ಪಾಲಕರು ಮಕ್ಕಳ ಲಸಿಕಾಕರಣದ ಬಗ್ಗೆ ನಿರ್ಲಕ್ಷ್ಯ ತೋರದೆ ಆರೋಗ್ಯ ಕಾರ್ಯಕರ್ತರ ಮಾರ್ಗದರ್ಶನ ಪಡೆಯಬೇಕು ಎಂದು ಹೇಳಿದರು.

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಮಾತನಾಡಿ, ನವಜಾತ ಶಿಶುಗಳಿಗೆ ಜನನದಿಂದ ಆರು ತಿಂಗಳವರೆಗೆ ತಾಯಿಯ ಎದೆಹಾಲನ್ನು ಮಾತ್ರ ನೀಡಬೇಕು. ತಾಯಿಯ ಎದೆಹಾಲಿನಲ್ಲಿ ಮಗುವಿನ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳು ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗುವ ಅಂಶಗಳಿರುತ್ತವೆ. ಆರು ತಿಂಗಳು ಪೂರ್ಣಗೊಂಡ ನಂತರ ಎದೆಹಾಲಿನ ಜೊತೆಗೆ ಮಗುವಿನ ವಯಸ್ಸಿಗೆ ಅನುಗುಣವಾಗಿ ಪೂರಕ ಪೌಷ್ಟಿಕ ಆಹಾರ ನೀಡಬೇಕು ಎಂದು ತಿಳಿಸಿದರು.

ಕುಟುಂಬದ ಆರೋಗ್ಯ ಮತ್ತು ತಾಯಿ-ಮಗುವಿನ ಸುರಕ್ಷತೆಯ ದೃಷ್ಟಿಯಿಂದ ಕುಟುಂಬ ಯೋಜನೆಯ ಬಗ್ಗೆ ಅರಿವು ಹೊಂದುವುದು ಅಗತ್ಯವಾಗಿದೆ. ಎರಡು ಮಕ್ಕಳ ಜನನದ ನಡುವೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವುದರಿಂದ ತಾಯಿಯ ದೈಹಿಕ ಆರೋಗ್ಯ ಸುಧಾರಿಸುವುದರ ಜೊತೆಗೆ ಮಕ್ಕಳ ಆರೈಕೆ ಹಾಗೂ ಪೌಷ್ಟಿಕ ಬೆಳವಣಿಗೆಗೆ ಹೆಚ್ಚಿನ ಅವಕಾಶ ದೊರೆಯುತ್ತದೆ. ಆರೋಗ್ಯಕರ ಕುಟುಂಬಗಳಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ, ನೈರ್ಮಲ್ಯ ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವ ಅಗತ್ಯವಿದೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಆರೋಗ್ಯ ಇಲಾಖೆಯ ಸೇವೆಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ತಲುಪಿಸುವುದು ಇಂತಹ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಾದ ಚಂದ್ರಿಕಾ, ಸುಭದ್ರಾ, ವಿದ್ಯಾ, ಬಿ. ಲಕ್ಷ್ಮೀ ಹಾಗೂ ಎನ್. ಲಕ್ಷ್ಮೀ ಉಪಸ್ಥಿತರಿದ್ದರು.