ರಾಯಚೂರು: ಗ್ರಾಮೀಣ ಜನತೆಯನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೇಷರತ್ ಕ್ಷಮೆಯಾಚಿಸಬೇಕು. ಜೊತೆಗೆ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹಾಗೂ ಹಾಲು, ಮೊಸರಿನ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಜನತಾದಳ (ಜಾತ್ಯತೀತ) ಘಟಕದ ಕಾರ್ಯಕರ್ತರು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
‘ನಾವು ಹಳ್ಳಿ ಗುಗ್ಗುಗಳು ಏನಿವಾಗ?’ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದ ಬಹುಸಂಖ್ಯಾತ ಜನರು ಗ್ರಾಮೀಣ ಪ್ರದೇಶಗಳಲ್ಲಿ ನೆಲೆಸಿದ್ದು, ಕೃಷಿ ಹಾಗೂ ಗ್ರಾಮೀಣ ಆರ್ಥಿಕತೆಯೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಇಂತಹ ಜನರನ್ನು ಗೌರವಿಸುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಆದರೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಟೀಕಿಸುವ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಗುಗ್ಗು’ ಹಾಗೂ ‘ವಿಲೇಜ್ ಈಡಿಯಟ್ಸ್’ ಎಂಬ ಪದಗಳನ್ನು ಬಳಸುವ ಮೂಲಕ ಗ್ರಾಮೀಣ ಜನರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವವರು ಸಾರ್ವಜನಿಕವಾಗಿ ಮಾತನಾಡುವಾಗ ಸಂಯಮ ಹಾಗೂ ಗೌರವ ಕಾಪಾಡಿಕೊಳ್ಳಬೇಕು. ಗ್ರಾಮೀಣ ಜನರ ಭಾವನೆಗಳಿಗೆ ನೋವುಂಟುಮಾಡುವ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಯಾವುದೇ ಷರತ್ತು ವಿಧಿಸದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗ್ರಾಮೀಣ ಹಿನ್ನೆಲೆಯಿಂದ ರಾಜಕೀಯ ಕ್ಷೇತ್ರಕ್ಕೆ ಬಂದ ನಾಯಕರಾಗಿದ್ದು, ರೈತರ ಹಿತಾಸಕ್ತಿ ಕಾಪಾಡಲು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ರೈತರ ಸಾಲಮನ್ನಾ, ನೀರಾವರಿ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಪ್ರಗತಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಇಂತಹ ನಾಯಕರನ್ನು ಅವಹೇಳನ ಮಾಡುವ ಮೂಲಕ ಗ್ರಾಮೀಣ ಸಮುದಾಯದ ಗೌರವಕ್ಕೂ ಧಕ್ಕೆ ತರಲಾಗಿದೆ ಎಂದು ಮನವಿಯಲ್ಲಿ ದೂರಿದರು.
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಗಳಿಂದ ಸಾಮಾನ್ಯ ಜನರ ಆರ್ಥಿಕ ಹೊರೆ ಹೆಚ್ಚಾಗಿದೆ. ಬಸ್ ಪ್ರಯಾಣ ದರದ ಜೊತೆಗೆ ಹಾಲು ಮತ್ತು ಮೊಸರಿನ ಬೆಲೆ ಹೆಚ್ಚಿಸಿರುವುದರಿಂದ ಬಡವರು, ಮಧ್ಯಮ ವರ್ಗದವರು, ಕೂಲಿ ಕಾರ್ಮಿಕರು ಹಾಗೂ ರೈತ ಕುಟುಂಬಗಳು ಸಂಕಷ್ಟ ಎದುರಿಸುವಂತಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ದರ ಏರಿಕೆ ನಿರ್ಧಾರಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ರೈತರಿಗೆ ಬೆಳೆಹಾನಿ ಪರಿಹಾರ ವಿತರಣೆ ಕುರಿತು ಸರ್ಕಾರ ಸ್ಪಷ್ಟ ಮಾಹಿತಿ ನೀಡಬೇಕು. ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಸರ್ಕಾರಿ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ವರದಿಯಾಗಿದ್ದರೂ ಸಂಬಂಧಪಟ್ಟ ಸಚಿವರು ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುವ ಹಾಗೂ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಮನವಿಯಲ್ಲಿ ಉಲ್ಲೇಖಿಸಿರುವ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಜೆಡಿಎಸ್ ಮುಖಂಡರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಏರುಸಾಕ್ಷಿ, ಜಿಲ್ಲಾ ಕಾರ್ಯಾಧ್ಯಕ್ಷ ಎನ್. ಶಿವಶಂಕರ್, ರಾಜ್ಯ ಕಾರ್ಯದರ್ಶಿ ಲಕ್ಷ್ಮೀಪತಿ ಗಾಣದಾಳ, ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ, ನಗರ ಅಧ್ಯಕ್ಷ ಬಿ. ತಿಮ್ಮಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಜಂಬುನಾಥ ಯಾದವ, ಗ್ರಾಮಾಂತರ ಅಧ್ಯಕ್ಷ ನಾಗರಾಜಗೌಡ, ಜಿಲ್ಲಾ ಪರಿಶಿಷ್ಟ ಘಟಕದ ಅಧ್ಯಕ್ಷ ಹಂಪಯ್ಯ ನಾಯಕ, ನರಸಪ್ಪ ಆಶಾಪೂರ, ಮುಖಂಡರಾದ ಪಿ. ರಾಜು, ನರಸಿಂಹಲು, ಆಂಜಿನಯ್ಯ ಯಾದವ, ಸೀಮಾ ನದಾಫ್, ಶಾಲಂ, ಅಮ್ಮದ್ ಹುಸೇನ್, ಸಾಬೀರ್, ಪರ್ವೇಜ್, ಅಲಂಬಾಬು, ಆದಿರಾಜ್, ವೆಂಕಟಸ್ವಾಮಿ, ಅಮಿತ್ ಸುಂಕಾರಿ ಸೇರಿದಂತೆ ವಕೀಲರು ಹಾಗೂ ಪಕ್ಷದ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.



