ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದ ಹಿಂದಿನ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿರುವುದನ್ನು ವಿರೋಧಿಸಿ, ರಾಜ್ಯ ಸರ್ಕಾರ ತಕ್ಷಣ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ಹೆಚ್ಚುವರಿ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.
ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ನಿರಂತರ ಹೋರಾಟದ ಪರಿಣಾಮವಾಗಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿತ್ತು. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಶಿಫಾರಸು ಆಧರಿಸಿ ಪರಿಶಿಷ್ಟ ಜಾತಿಯ 101 ಸಮುದಾಯಗಳಿಗೆ ಇದ್ದ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ 51 ಸಮುದಾಯಗಳಿಗೆ ಇದ್ದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಏರಿಸಲಾಗಿತ್ತು ಎಂದು ವಿವರಿಸಿದರು.
ಈ ನಿರ್ಧಾರದಿಂದ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.56ಕ್ಕೆ ಹೆಚ್ಚಳವಾಗಿತ್ತು. ಆದರೆ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿರುವುದು ಪರಿಶಿಷ್ಟ ಸಮುದಾಯಗಳ ಹಿತಾಸಕ್ತಿಗೆ ಹಿನ್ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಬೇಕು. ಅಲ್ಲದೆ, ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿಗೆ ಕರೆದೊಯ್ದು ಹೆಚ್ಚುವರಿ ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮೀಸಲಾತಿ ರಕ್ಷಣೆಯ ಜೊತೆಗೆ ಪರಿಶಿಷ್ಟ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ 15 ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು. ಬಡ ಹಾಗೂ ನಿವೇಶನರಹಿತ ಕುಟುಂಬಗಳಿಗೆ ಸರ್ಕಾರಿ ಅಥವಾ ಖಾಸಗಿ ಜಮೀನು ಗುರುತಿಸಿ ನಿವೇಶನ ಹಂಚಿಕೆ ಮಾಡಬೇಕು. ನಿವೇಶನ ಹೊಂದಿದ್ದರೂ ಸ್ವಂತ ಮನೆ ಇಲ್ಲದ ಕುಟುಂಬಗಳಿಗೆ ವಸತಿ ಯೋಜನೆಗಳಡಿ ಮನೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಅವರ ಸಾಮಾಜಿಕ ಹೋರಾಟ ಹಾಗೂ ದಲಿತ ಸಮುದಾಯಗಳ ಏಳಿಗೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಅವರ ಜನ್ಮದಿನವನ್ನು ಸರ್ಕಾರದ ವತಿಯಿಂದ ಅಧಿಕೃತವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಕಂದಾಯ ಕಾಯ್ದೆಯ ನಮೂನೆ 57ರಡಿ ಅರ್ಜಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರ ಜಮೀನುಗಳನ್ನು ಸಕ್ರಮಗೊಳಿಸಿ ಹಕ್ಕುಪತ್ರ ವಿತರಿಸಬೇಕು. ಸರ್ಕಾರಿ ಜಾಗಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಸಂಬಂಧಿಸಿದಂತೆ 94 ಮತ್ತು 94ಸಿ ನಿಯಮಗಳಡಿ ಅರ್ಹ ಪ್ರಕರಣಗಳನ್ನು ಸಕ್ರಮಗೊಳಿಸಿ ವಸತಿ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಡುವ ಅನುದಾನವನ್ನು ಉದ್ದೇಶಿತ ಯೋಜನೆಗಳಿಗೆ ಸಮರ್ಪಕವಾಗಿ ಬಳಸಬೇಕು. ಅನುದಾನದ ದುರ್ಬಳಕೆ ಹಾಗೂ ಬೇರೆ ಉದ್ದೇಶಗಳಿಗೆ ವರ್ಗಾವಣೆ ತಡೆಯಲು ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆ-2013ರ ಸೆಕ್ಷನ್ 7(ಸಿ) ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಜಾತಿ ಹಾಗೂ ಕೋಮು ಸಂಘರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವ್ಯಕ್ತಿಗಳು ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ₹8.25 ಲಕ್ಷದಿಂದ ₹25 ಲಕ್ಷಕ್ಕೆ ಹೆಚ್ಚಿಸಬೇಕು. ಸಂತ್ರಸ್ತ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.
ಗಂಗಾ ಕಲ್ಯಾಣ, ಭೂ ಒಡೆತನ ಹಾಗೂ ಉದ್ಯಮಶೀಲತೆ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನವನ್ನು ವಿಳಂಬವಿಲ್ಲದೆ ಮಂಜೂರು ಮಾಡಬೇಕು. 2026-27ನೇ ಸಾಲಿನಲ್ಲಿ ಯೋಜನೆಗಳ ಘಟಕ ವೆಚ್ಚ ಹಾಗೂ ಫಲಾನುಭವಿಗಳ ಗುರಿಯನ್ನು ಹೆಚ್ಚಿಸುವ ಮೂಲಕ ಹೆಚ್ಚಿನ ಕುಟುಂಬಗಳಿಗೆ ಸೌಲಭ್ಯ ತಲುಪಿಸಬೇಕು ಎಂದು ಮನವಿ ಮಾಡಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು. ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಸೇವೆಯನ್ನೂ ಖಾಯಂಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ದೇವದಾಸಿ ಹಾಗೂ ವಿಧವಾ ಮಹಿಳೆಯರಿಗೆ ನೀಡಲಾಗುತ್ತಿರುವ ಮಾಸಾಶನವನ್ನು ₹5,000ಕ್ಕೆ ಹೆಚ್ಚಿಸಬೇಕು. ಸರ್ಕಾರಿ ವಸತಿ ನಿಲಯಗಳ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚವನ್ನು ₹1,000ಕ್ಕೆ ಏರಿಸಿ ಗುಣಮಟ್ಟದ ಆಹಾರ ಒದಗಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ-1989ರಡಿ ದಾಖಲಾಗಿರುವ ಪ್ರಕರಣಗಳ ಸಂತ್ರಸ್ತ ಕುಟುಂಬಗಳಿಗೆ ಬಾಕಿ ಇರುವ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ದೊರಕಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸಬೇಕು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯ್ದೆ-2020ನ್ನು ರದ್ದುಪಡಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದಲಿತ ಸಂಘಟನೆಗಳ ಮುಖಂಡರ ಸಭೆಯನ್ನು ನಿಯಮಿತವಾಗಿ ಆಯೋಜಿಸಬೇಕು. ಪರಿಶಿಷ್ಟ ಸಮುದಾಯಗಳು ಎದುರಿಸುತ್ತಿರುವ ವಸತಿ, ಶಿಕ್ಷಣ, ಉದ್ಯೋಗ, ಭೂಮಿ, ಮೂಲಸೌಕರ್ಯ ಹಾಗೂ ಸಾಮಾಜಿಕ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಿ ಕಾಲಮಿತಿಯೊಳಗೆ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್, ರಾಜ್ಯ ಖಜಾಂಚಿ ಬಿ.ಎ. ಕಾಟ್ಟೆ, ರಾಯಚೂರು ವಿಭಾಗದ ಪದಾಧಿಕಾರಿಗಳು, ವಿವಿಧ ಜಿಲ್ಲೆಗಳ ರಾಜ್ಯ, ಜಿಲ್ಲಾ ಹಾಗೂ ವಿಭಾಗೀಯ ಮುಖಂಡರು ಮತ್ತು ದಲಿತ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.



