ಲಿಂಗಸುಗೂರು: ತಾಲೂಕಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿಕಾರರು, ಅಂಗನವಾಡಿ ಕೇಂದ್ರಗಳ ಮಕ್ಕಳು ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಮತ್ತು ಸೌಲಭ್ಯಗಳ ಒದಗಿಸುವಿಕೆಯಲ್ಲಿ ಯಾವುದೇ ರೀತಿಯ ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಎಚ್ಚರಿಕೆ ನೀಡಿದರು.
ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳು, ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಸ್ಥಳಗಳು, ಅಂಗನವಾಡಿ ಕೇಂದ್ರ ಹಾಗೂ ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಬರಗಾಲದ ಪರಿಸ್ಥಿತಿ ಇರುವುದರಿಂದ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ನಿರಂತರ ಉದ್ಯೋಗ ಒದಗಿಸುವುದು ಅತ್ಯಂತ ಅಗತ್ಯವಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ 125 ಮಾನವ ದಿನಗಳ ಉದ್ಯೋಗವನ್ನು ಇನ್ನೂ 50 ದಿನಗಳವರೆಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕೂಲಿಕಾರರಿಗೆ ಸಕಾಲದಲ್ಲಿ ಕೂಲಿ ಹಣ ಪಾವತಿಸುವುದರ ಜೊತೆಗೆ ನಿರಂತರವಾಗಿ ಕೆಲಸ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗ್ರಾಮೀಣ ಭಾಗದ ಜನರು ಜೀವನೋಪಾಯಕ್ಕಾಗಿ ಉದ್ಯೋಗ ಖಾತರಿ ಯೋಜನೆಯನ್ನು ಅವಲಂಬಿಸಿರುವುದರಿಂದ ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬವಾಗಬಾರದು. ಕೆಲಸಕ್ಕೆ ಬರುವ ಕೂಲಿಕಾರರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಕೂಲಿ ಪಾವತಿಯಲ್ಲಿ ಅನಗತ್ಯ ವಿಳಂಬವಾಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.
ನಂತರ ದೇವರಭೂಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಚುರುಕುಗೊಳಿಸಿ, ಮುಂದಿನ ಎರಡು ವಾರಗಳೊಳಗೆ ನಿರೀಕ್ಷಿತ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಕಲಿಕೆ, ಆರೈಕೆ ಹಾಗೂ ಕೇಂದ್ರದಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳನ್ನು ತಾಯಿಯಂತೆ ಪ್ರೀತಿ ಮತ್ತು ಕಾಳಜಿಯಿಂದ ನೋಡಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಿದಾಗ ಅವರು ನಿಯಮಿತವಾಗಿ ಕೇಂದ್ರಕ್ಕೆ ಬರಲು ಆಸಕ್ತಿ ತೋರುತ್ತಾರೆ. ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವುದರ ಜೊತೆಗೆ ಕಲಿಕಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವದ್ದಾಗಿದ್ದು, ಮಕ್ಕಳ ಸುರಕ್ಷತೆ, ಪೌಷ್ಟಿಕ ಆಹಾರ ಹಾಗೂ ಕಲಿಕೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಸೂಚಿಸಿದರು.
ಬಳಿಕ ವಸತಿ ಶಾಲೆಗೆ ಭೇಟಿ ನೀಡಿದ ಸಿಇಒ ಈಶ್ವರ ಕುಮಾರ್ ಕಾಂದೂ, ವಿದ್ಯಾರ್ಥಿಗಳಿಗೆ ವಿತರಿಸಲು ಸಂಗ್ರಹಿಸಿದ್ದ ಆಹಾರಧಾನ್ಯಗಳ ಗುಣಮಟ್ಟವನ್ನು ಪರಿಶೀಲಿಸಿದರು. ಅಡುಗೆ ಸಿಬ್ಬಂದಿಗೆ ಆಹಾರ ತಯಾರಿಕೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ರುಚಿಕರ, ಗುಣಮಟ್ಟದ ಹಾಗೂ ಶುಚಿಯಾದ ಆಹಾರವನ್ನು ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಆಹಾರ ಪೂರೈಕೆ ಹಾಗೂ ಮೂಲಸೌಕರ್ಯಗಳ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ವೆಂಕಟೇಶ ದೇಸಾಯಿ, ತಾಲೂಕು ಯೋಜನಾಧಿಕಾರಿ ಮಹಿಬೂಬ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರತ್ನ, ತಾಂತ್ರಿಕ ಸಂಯೋಜಕ ಅಶೋಕ, ಐಇಸಿ ಸಂಯೋಜಕ ಬಾಲಪ್ಪ, ತಾಂತ್ರಿಕ ಸಹಾಯಕ ಮಾನಪ್ಪ, ಬಿಎಫ್ಟಿ ಚೆನ್ನಬಸವ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.



