ರಾಯಚೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಗಿಡಮರಗಳನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಪರಿಸರವನ್ನು ಉಳಿಸಿಕೊಡಬೇಕು ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ. ನಾಗರಾಜ ಕರೆ ನೀಡಿದರು.

ಕಲ್ಮಲಾದ ಜನತಾ ಕಾಲೋನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಾರಿದೀಪ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಪರಿಸರ ಜಾಗೃತಿ ಹಾಗೂ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉತ್ತಮ ಪರಿಸರವೇ ಆರೋಗ್ಯಕರ ಜೀವನದ ಮೂಲಾಧಾರವಾಗಿದೆ. ಗಾಳಿ, ನೀರು, ಮಣ್ಣು ಹಾಗೂ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿದ್ದರೆ ಮಾನವನ ಆರೋಗ್ಯವೂ ಉತ್ತಮವಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯನಾಶ, ಹವಾಮಾನ ವೈಪರೀತ್ಯ, ಪ್ಲಾಸ್ಟಿಕ್ ಬಳಕೆ, ವಾಯುಮಾಲಿನ್ಯ ಹಾಗೂ ಜಲಮಾಲಿನ್ಯದಿಂದ ಪರಿಸರದ ಸಮತೋಲನ ಹದಗೆಡುತ್ತಿದ್ದು, ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ದಾರಿದೀಪ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಮಾತನಾಡಿ, ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಇದರಿಂದ ಬರಗಾಲ, ಉಷ್ಣಾಂಶ ಏರಿಕೆ ಹಾಗೂ ಪ್ರಕೃತಿಯ ಅಸಮತೋಲನದಂತಹ ಸಮಸ್ಯೆಗಳು ಎದುರಾಗುತ್ತಿವೆ. ಪರಿಸರವನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ತಮ್ಮ ಶಾಲೆ, ಮನೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಸಿಗಳನ್ನು ನೆಡುವುದರ ಜೊತೆಗೆ ಅವುಗಳನ್ನು ನಿರಂತರವಾಗಿ ಪೋಷಿಸಬೇಕು. ಕೇವಲ ಸಸಿ ನೆಡುವುದರಿಂದ ಪರಿಸರ ಸಂರಕ್ಷಣೆ ಸಾಧ್ಯವಿಲ್ಲ. ಅವುಗಳನ್ನು ಬೆಳೆಸಿ ಮರಗಳನ್ನಾಗಿ ಮಾಡುವ ಸಂಕಲ್ಪ ಪ್ರತಿಯೊಬ್ಬರಲ್ಲಿಯೂ ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಸುಮಲತಾ ಬಿ., ದಾರಿದೀಪ ಸಂಸ್ಥೆಯ ಅಧ್ಯಕ್ಷ ಮಂಜುನಾಥ, ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ. ನಾಗರಾಜ, ಮುನಿಸ್ವಾಮಿ, ಬಸವ, ದೇವರಾಜ, ಚಂದ್ರು ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.