ರಾಯಚೂರು, ನ. 7: ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿರುವ ಹಿರಿಯ ಸಾಹಿತಿ ವೀರಹನುಮಾನ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ರಾಯಚೂರು ಜಿಲ್ಲೆಯ ಸಮಸ್ತ ಸಾಹಿತಿಗಳಿಗೆ ಸಂದ ಗೌರವವಾಗಿದೆ. ಅವರ ಸಾಹಿತ್ಯ ಸಾಧನೆಯನ್ನು ರಾಜ್ಯ ಸರ್ಕಾರ ಗುರುತಿಸಿರುವುದು ಜಿಲ್ಲೆಯ ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅಭಿಪ್ರಾಯಪಟ್ಟರು.
ನಗರದ ಮುನ್ನೂರುವಾಡಿ ಬಡಾವಣೆಯ ಲಕ್ಷ್ಮಿದೇವಿ ಕಲ್ಯಾಣ ಮಂಟಪದಲ್ಲಿ ಶನಿವಾರ ಮುನ್ನೂರು ಕಾಪು ಸಮಾಜದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ವೀರಹನುಮಾನ ಹಾಗೂ ರಾಜ್ಯ ವರ್ಣಕಲಾ ಪ್ರಶಸ್ತಿ ಪುರಸ್ಕೃತ ಕಲಾವಿದ ಹೇಮರೆಡ್ಡಿ ಎನ್. ಅವರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಾಹಿತಿ ವೀರಹನುಮಾನ ಅವರು ಕೇವಲ ಸಾಹಿತ್ಯ ರಚನೆಗೆ ಸೀಮಿತವಾಗದೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ವೈಚಾರಿಕ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸರಳತೆ, ಮಾನವೀಯ ಮೌಲ್ಯಗಳು ಹಾಗೂ ಎಲ್ಲ ಸಮುದಾಯಗಳೊಂದಿಗೆ ಸೌಹಾರ್ದಯುತ ಸಂಬಂಧ ಹೊಂದಿರುವ ಅವರ ವ್ಯಕ್ತಿತ್ವ ಇತರರಿಗೆ ಮಾದರಿಯಾಗಿದೆ. ಸಾಹಿತ್ಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಜೊತೆಗೆ ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಅವರು ಸುಸಂಸ್ಕೃತ ವ್ಯಕ್ತಿತ್ವದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ಬಣ್ಣಿಸಿದರು.
ಯಾವುದೇ ಪ್ರಶಸ್ತಿ ಅಥವಾ ಗೌರವಕ್ಕಾಗಿ ಹಂಬಲಿಸದೆ ತಮ್ಮ ಸಾಹಿತ್ಯ ಸೇವೆಯನ್ನೇ ಪ್ರಧಾನವಾಗಿ ಪರಿಗಣಿಸಿದ ವೀರಹನುಮಾನ ಅವರು ಎಂದಿಗೂ ರಾಜ್ಯೋತ್ಸವ ಪ್ರಶಸ್ತಿಗೆ ತಮ್ಮ ಹೆಸರನ್ನು ಶಿಫಾರಸು ಮಾಡುವಂತೆ ಯಾರನ್ನೂ ಸಂಪರ್ಕಿಸಿಲ್ಲ. ಅವರ ನಿರಂತರ ಸಾಹಿತ್ಯ ಕೃಷಿ, ಸಾಧನೆ ಹಾಗೂ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿರುವುದು ನಿಜವಾದ ಪ್ರತಿಭೆಗೆ ದೊರೆತ ಮನ್ನಣೆಯಾಗಿದೆ ಎಂದು ಹೇಳಿದರು.
ರಾಯಚೂರು ಜಿಲ್ಲೆಯ ಸಾಹಿತ್ಯ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ವೀರಹನುಮಾನ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ದೊರೆತಿರುವ ರಾಜ್ಯೋತ್ಸವ ಪ್ರಶಸ್ತಿ ವೈಯಕ್ತಿಕ ಸಾಧನೆಗೆ ಸಂದ ಗೌರವ ಮಾತ್ರವಲ್ಲದೆ ಜಿಲ್ಲೆಯ ಸಾಹಿತ್ಯ ಸಮುದಾಯದ ಹೆಮ್ಮೆಯ ಪ್ರತೀಕವಾಗಿದೆ ಎಂದು ತಿಳಿಸಿದರು.
ಮುನ್ನೂರು ಕಾಪು ಸಮಾಜವು ಸಾಮಾಜಿಕ ಸೇವೆಯ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿದೆ. ಮುಂಗಾರು ಹಬ್ಬ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಾಡಿನ ಸಂಸ್ಕೃತಿ, ಕಲೆ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಸಮಾಜದ ಸಾಧಕರನ್ನು ಗುರುತಿಸಿ ಸಾರ್ವಜನಿಕವಾಗಿ ಗೌರವಿಸುವ ಇಂತಹ ಕಾರ್ಯಗಳು ಇತರ ಸಮುದಾಯಗಳಿಗೂ ಪ್ರೇರಣೆಯಾಗಿವೆ. ಈ ನಿಟ್ಟಿನಲ್ಲಿ ಮುನ್ನೂರು ಕಾಪು ಸಮಾಜವು ಸಾಂಸ್ಕೃತಿಕ ರಾಯಭಾರಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಸಮಾರಂಭದಲ್ಲಿ ಮಾತನಾಡಿದ ರಾಯಚೂರು ನಗರ ಶಾಸಕ ಡಾ. ಶಿವರಾಜ ಪಾಟೀಲ್, ಕರ್ನಾಟಕದ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಯಚೂರು ಜಿಲ್ಲೆಗೆ ವಿಶಿಷ್ಟ ಸ್ಥಾನವಿದೆ. ಮೈಸೂರಿನ ನಂತರ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ರಾಯಚೂರು ಜಿಲ್ಲೆ ಮುಂಚೂಣಿಯಲ್ಲಿದೆ. ತೆಲಂಗಾಣ ಗಡಿಭಾಗದಲ್ಲಿರುವ ರಾಯಚೂರು ಜಿಲ್ಲೆ ಅನೇಕ ಪ್ರತಿಭಾವಂತ ಸಾಹಿತಿಗಳು, ಕಲಾವಿದರು ಹಾಗೂ ಸಾಂಸ್ಕೃತಿಕ ಸಾಧಕರನ್ನು ನಾಡಿಗೆ ಪರಿಚಯಿಸಿರುವ ಹೆಗ್ಗಳಿಕೆ ಹೊಂದಿದೆ ಎಂದರು.
ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಪರಿಶ್ರಮ ಮತ್ತು ಸಾಧನೆಯ ಮೂಲಕ ತಮ್ಮದೇ ಆದ ಗುರುತು ಮೂಡಿಸಿರುವ ವೀರಹನುಮಾನ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಜಿಲ್ಲೆಯ ಜನತೆಗೆ ಸಂತಸ ತಂದಿದೆ. ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಯುವ ಪೀಳಿಗೆಯಲ್ಲಿ ಸಾಹಿತ್ಯ ಮತ್ತು ಕಲೆಯ ಬಗ್ಗೆ ಆಸಕ್ತಿ ಹೆಚ್ಚುತ್ತದೆ. ಜಿಲ್ಲೆಯ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ ಮಾತನಾಡಿ, ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ಗೌರವಗಳಲ್ಲಿ ಒಂದಾಗಿದೆ. ಹಿರಿಯ ಸಾಹಿತಿ ವೀರಹನುಮಾನ ಅವರ ಸುದೀರ್ಘ ಸಾಹಿತ್ಯ ಸೇವೆಯನ್ನು ಗುರುತಿಸಿ ಸರ್ಕಾರ ಈ ಗೌರವ ನೀಡಿರುವುದು ಪ್ರಶಸ್ತಿಯ ಘನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇಂತಹ ಸಾಧಕರನ್ನು ಸಮಾಜದ ವತಿಯಿಂದ ಸನ್ಮಾನಿಸುತ್ತಿರುವುದು ಅಭಿನಂದನಾರ್ಹ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿರಿಯ ಸಾಹಿತಿಗಳು ತಮ್ಮ ಅನುಭವ ಮತ್ತು ಜ್ಞಾನವನ್ನು ಯುವ ಬರಹಗಾರರೊಂದಿಗೆ ಹಂಚಿಕೊಳ್ಳಬೇಕು. ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಹೊಸ ತಲೆಮಾರಿನ ಬರಹಗಾರರನ್ನು ಪರಿಚಯಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ರಾಜ್ಯ ವರ್ಣಕಲಾ ಪ್ರಶಸ್ತಿ ಪುರಸ್ಕೃತ ಕಲಾವಿದ ಹೇಮರೆಡ್ಡಿ ಎನ್. ಅವರ ಸಾಧನೆಯನ್ನು ಗಣ್ಯರು ಪ್ರಶಂಸಿಸಿದರು. ದೈಹಿಕ ಅಂಗವೈಕಲ್ಯವನ್ನು ತಮ್ಮ ಕಲಾಸಾಧನೆಗೆ ಅಡ್ಡಿಯಾಗದಂತೆ ಎದುರಿಸಿ, ವರ್ಣಕಲೆಯ ಮೂಲಕ ವಿಶಿಷ್ಟ ಪ್ರತಿಭೆ ಪ್ರದರ್ಶಿಸಿರುವ ಹೇಮರೆಡ್ಡಿ ಅವರು ಇತರರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಕಲಾ ಸಾಧನೆಯನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿ ನೀಡಿರುವುದು ರಾಯಚೂರು ಜಿಲ್ಲೆಗೆ ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುನ್ನೂರು ಕಾಪು ಸಮಾಜದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ವೀರಹನುಮಾನ ಹಾಗೂ ರಾಜ್ಯ ವರ್ಣಕಲಾ ಪ್ರಶಸ್ತಿ ಪುರಸ್ಕೃತ ಹೇಮರೆಡ್ಡಿ ಎನ್. ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮುನ್ನೂರು ಕಾಪು ಸಮಾಜದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಎ. ಪಾಪಾರೆಡ್ಡಿ, ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ಯು. ಕೃಷ್ಣಮೂರ್ತಿ, ಕೆ. ಶಾಂತಪ್ಪ, ಜಯವಂತರಾವ್ ಪತಂಗಿ, ಮಹಾಂತೇಶ್ ಮಸ್ಕಿ, ಗಾಧರ ಬೆಟ್ಟಪ್ಪ, ಜಯಣ್ಣ, ಮಹಮ್ಮದ್ ಶಾಲಂ ಸೇರಿದಂತೆ ಸಮಾಜದ ಮುಖಂಡರು, ಸಾಹಿತಿಗಳು, ಕಲಾವಿದರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



