ಜನಸಾಮಾನ್ಯರ ಬದುಕು ದುಸ್ತರಗೊಳಿಸಿದ ಕಾಂಗ್ರೆಸ್ ಸರ್ಕಾರ: ಶಾಸಕ ಡಾ. ಶಿವರಾಜ ಪಾಟೀಲ್ ಆಕ್ರೋಶ
ರಾಯಚೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ, ಹಾಲಿನ ದರ, ಬಸ್ ಪ್ರಯಾಣ ದರ ಹಾಗೂ ವಿವಿಧ ಸರ್ಕಾರಿ ಸೇವೆಗಳ ಶುಲ್ಕ ಹೆಚ್ಚಳವನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಗುರುವಾರ ನಗರದಲ್ಲಿ ಭಿಕ್ಷಾಪಾತ್ರೆ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು. ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವುದರ ಜೊತೆಗೆ ಸಂಕಷ್ಟದಲ್ಲಿರುವ ರೈತರಿಗೆ ಸಮರ್ಪಕ ಪರಿಹಾರ ಒದಗಿಸುವಂತೆ ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಸ್ ನಿಲ್ದಾಣದವರೆಗೆ ಶಾಸಕ ಡಾ. ಶಿವರಾಜ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಕೈಯಲ್ಲಿ ಭಿಕ್ಷಾಪಾತ್ರೆ ಹಿಡಿದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ. ಶಿವರಾಜ ಪಾಟೀಲ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನಸಾಮಾನ್ಯರ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಒಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ವಿವಿಧ ಸರ್ಕಾರಿ ಸೇವೆಗಳ ಶುಲ್ಕ ಹೆಚ್ಚಿಸುವ ಮೂಲಕ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರಲಾಗುತ್ತಿದೆ ಎಂದು ಆರೋಪಿಸಿದರು.
ಹಾಲು, ಮೊಸರು, ತುಪ್ಪ, ಬಸ್ ಪ್ರಯಾಣ ದರ ಹಾಗೂ ವಿದ್ಯುತ್ ದರ ಹೆಚ್ಚಳದಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಆರ್ಥಿಕ ನೀತಿಗಳಿಂದ ಜನರು ಭಿಕ್ಷೆ ಬೇಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಹಿತ ಕಾಪಾಡಬೇಕಾದ ಸರ್ಕಾರವೇ ಅವರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಳೆ ಹಾಗೂ ಬೆಳೆ ಹಾನಿಯಿಂದ ತೊಂದರೆ ಅನುಭವಿಸುತ್ತಿರುವ ರೈತರಿಗೆ ಎಕರೆಗೆ ಕೇವಲ 2,500 ರೂ. ಪರಿಹಾರ ಘೋಷಿಸಿರುವುದು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕ್ರಮವಲ್ಲ. ಯೂರಿಯಾ ಸೇರಿದಂತೆ ಕೃಷಿ ಪರಿಕರಗಳ ಬೆಲೆ ಹೆಚ್ಚಾಗಿರುವ ಸಂದರ್ಭದಲ್ಲಿ ಸರ್ಕಾರ ನೀಡುತ್ತಿರುವ ಪರಿಹಾರ ಒಂದು ಚೀಲ ಗೊಬ್ಬರ ಖರೀದಿಸಲೂ ಸಾಕಾಗುವುದಿಲ್ಲ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸರ್ಕಾರದ ಪ್ರಮುಖರು ರೈತರ ವಾಸ್ತವ ಪರಿಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ಆಗ್ರಹಿಸಿದರು.
ರಾಯಚೂರು ಭಾಗದ ರೈತರಿಗೆ ಮುಂಗಾರು ಮತ್ತು ಬೇಸಿಗೆ ಅವಧಿಯಲ್ಲಿಯೂ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸಲಾಗಿಲ್ಲ. ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರು ಹಾಗೂ ವಿದ್ಯುತ್ ಪೂರೈಕೆಯಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಇದರಿಂದ ರೈತರು ಬೆಳೆ ಉಳಿಸಿಕೊಳ್ಳಲು ಪರದಾಡುವಂತಾಗಿದೆ ಎಂದು ದೂರಿದರು.
ಅಂಗವಿಕಲರು, ವಿಧವೆಯರು ಹಾಗೂ ಇತರ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿ ಸಕಾಲಕ್ಕೆ ದೊರೆಯುತ್ತಿಲ್ಲ. ಯುವಕರಿಗೆ ಉದ್ಯೋಗಾವಕಾಶಗಳ ಕೊರತೆ ಎದುರಾಗಿದ್ದು, ಹೊರಗುತ್ತಿಗೆ ನೌಕರರು ಸೇರಿದಂತೆ ವಿವಿಧ ವರ್ಗಗಳ ಕಾರ್ಮಿಕರು ಅನಿಶ್ಚಿತತೆಯಲ್ಲಿ ಬದುಕುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಯೋಜನೆಯಡಿ ನಿರೀಕ್ಷಿತ ನೆರವು ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ಜನನ ಮತ್ತು ಮರಣ ಪ್ರಮಾಣಪತ್ರ ಸೇರಿದಂತೆ ವಿವಿಧ ದಾಖಲೆಗಳ ಶುಲ್ಕ ಹೆಚ್ಚಿಸಲಾಗಿದೆ. ರೈತರು ಪಹಣಿ ಪಡೆಯಲು 100 ರೂ. ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ವಂತ ಜಮೀನಿನ ಸರ್ವೇ ಮಾಡಿಸಿಕೊಳ್ಳಲು 10 ಸಾವಿರ ರೂ. ಶುಲ್ಕ ವಿಧಿಸಲಾಗುತ್ತಿದೆ. ಇಂತಹ ನಿರ್ಧಾರಗಳು ಸಾಮಾನ್ಯ ಜನರ ಆರ್ಥಿಕ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳ ನಿರ್ವಹಣೆಯೂ ಸಮರ್ಪಕವಾಗಿಲ್ಲ. ಟೈರ್, ಟ್ಯೂಬ್, ಬ್ಯಾಟರಿ ಸೇರಿದಂತೆ ಅಗತ್ಯ ಬಿಡಿಭಾಗಗಳ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ಬದಲು ಪ್ರಯಾಣ ದರ ಹೆಚ್ಚಳಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಟೀಕಿಸಿದರು.
ರಾಜ್ಯ ಸರ್ಕಾರ ಕೂಡಲೇ ಬೆಲೆ ಹಾಗೂ ಶುಲ್ಕ ಹೆಚ್ಚಳದ ನಿರ್ಧಾರಗಳನ್ನು ಹಿಂಪಡೆಯಬೇಕು. ರೈತರಿಗೆ ಬೆಳೆ ಹಾನಿಗೆ ಅನುಗುಣವಾಗಿ ಪರಿಹಾರ ನೀಡಬೇಕು. ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ನಿಯಮಿತವಾಗಿ ವಿತರಿಸುವುದರ ಜೊತೆಗೆ ಉದ್ಯೋಗ, ನೀರಾವರಿ ಮತ್ತು ಸಾರಿಗೆ ಸಮಸ್ಯೆಗಳನ್ನು ಪರಿಹರಿಸಬೇಕು. ಇಲ್ಲವಾದಲ್ಲಿ ಸಾರ್ವಜನಿಕರೊಂದಿಗೆ ಸೇರಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಶಾಸಕ ಡಾ. ಶಿವರಾಜ ಪಾಟೀಲ್ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ್, ಕಡಗೋಳ್ ಅಂಜಿನಯ್ಯ, ರವೀಂದ್ರ ಜಲ್ದಾರ್, ರಾಜಕುಮಾರ್, ಸಂತೋಷ ರಾಜುಗುರು, ಶಶಿರಾಜ್, ಶರಣಮ್ಮ ಕಾಮರೆಡ್ಡಿ, ರೂಪ ಶ್ರೀನಿವಾಸ್ ನಾಯಕ್, ಅಶ್ವಿನಿ, ವಿಜಯರಾಜೇಶ್ವರಿ ಗೋಪಿ ಶೆಟ್ಟಿ, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.



