ಮಾನ್ವಿ: ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಾಮೂಹಿಕ ಶೌಚಾಲಯ ನಿರ್ಮಿಸುವ ಕುರಿತು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಅವರು ಬಸ್ ನಿಲ್ದಾಣದ ಸಮೀಪದ ಖಾಲಿ ಜಾಗವನ್ನು ಪರಿಶೀಲಿಸಿದರು.

ಪೋತ್ನಾಳ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಗ್ರಾಮದ ಸಾಮಾಜಿಕ ಕಾರ್ಯಕರ್ತ ಶರಣಕುಮಾರ ಮುದ್ದಂಗುಡ್ಡಿ ಅವರು ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಪೋತ್ನಾಳ ಗ್ರಾಮವು ಸುತ್ತಮುತ್ತಲಿನ 48 ಗ್ರಾಮಗಳ ಜನರಿಗೆ ಪ್ರಮುಖ ಕೇಂದ್ರವಾಗಿದ್ದು, ವಿವಿಧ ಕೆಲಸಗಳಿಗಾಗಿ ಪ್ರತಿದಿನ ಸಾವಿರಾರು ಜನರು ಗ್ರಾಮಕ್ಕೆ ಆಗಮಿಸುತ್ತಾರೆ. ಆದರೆ ಸಾರ್ವಜನಿಕರಿಗೆ ಅಗತ್ಯವಾದ ಶೌಚಾಲಯ, ಸುಸಜ್ಜಿತ ಬಸ್ ನಿಲ್ದಾಣ ಹಾಗೂ ಕುಡಿಯುವ ನೀರಿನ ಸೌಲಭ್ಯಗಳ ಕೊರತೆಯಿದೆ. ಇದರಿಂದ ಪ್ರಯಾಣಿಕರು, ಮಹಿಳೆಯರು, ವೃದ್ಧರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮದಲ್ಲಿ ಸುಸಜ್ಜಿತ ಬಸ್ ನಿಲ್ದಾಣ, ಸಾಮೂಹಿಕ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಕೆರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಅವರು ಪೋತ್ನಾಳ ಬಸ್ ನಿಲ್ದಾಣದ ಸಮೀಪದಲ್ಲಿರುವ ಖಾಲಿ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರ ತುರ್ತು ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ತಾತ್ಕಾಲಿಕ ಶೌಚಾಲಯ ನಿರ್ಮಿಸುವ ಸಾಧ್ಯತೆಗಳ ಕುರಿತು ಪರಿಶೀಲಿಸಿದರು.

ಅಲ್ಲದೆ, ಸುಸಜ್ಜಿತ ಬಸ್ ನಿಲ್ದಾಣ ಹಾಗೂ ಕುಡಿಯುವ ನೀರಿಗಾಗಿ ಕೆರೆ ನಿರ್ಮಾಣ ಸೇರಿದಂತೆ ಮನವಿಯಲ್ಲಿರುವ ಇತರ ಬೇಡಿಕೆಗಳ ಕುರಿತು ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಕ್ತರ್ ಪಾಷಾ ಸೇರಿದಂತೆ ಇತರರು ಉಪಸ್ಥಿತರಿದ್ದರು.