ರಾಯಚೂರು: ನೂತನ ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಿರುವ ಫಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ, ಫಲಕನಮರಡಿ, ಮೂಡಲಗುಂಡ, ಮದರಕಲ್, ದೇವರಗುಡ್ಡ ಹಾಗೂ ಊಟಿ ಗ್ರಾಮಗಳನ್ನು ಪುನಃ ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಿ, ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ನವೆಂಬರ್ 6ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನೂತನ ತಾಲೂಕು ರಚನೆಯ ಸಂದರ್ಭದಲ್ಲಿ ಭೌಗೋಳಿಕ ವಿಸ್ತೀರ್ಣ, ಜನಸಂಖ್ಯೆ, ಸಾರಿಗೆ ಸಂಪರ್ಕ, ಆಡಳಿತಾತ್ಮಕ ಅನುಕೂಲತೆ ಹಾಗೂ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳು ಸುಲಭವಾಗಿ ದೊರೆಯುವಂತಹ ಅಂಶಗಳನ್ನು ಪರಿಗಣಿಸಬೇಕಾಗುತ್ತದೆ. ಆದರೆ ಈ ಮಾನದಂಡಗಳನ್ನು ಸಮರ್ಪಕವಾಗಿ ಪರಿಶೀಲಿಸದೆ ತಮ್ಮ ಗ್ರಾಮಗಳನ್ನು ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಲಾಗಿದೆ ಎಂದು ಗ್ರಾಮಸ್ಥರು ಮನವಿಯಲ್ಲಿ ಆರೋಪಿಸಿದ್ದಾರೆ.
ಅರಕೇರಾ ಗ್ರಾಮವನ್ನು ತಾಲೂಕು ಕೇಂದ್ರವನ್ನಾಗಿ ರೂಪಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದರೂ, ಅಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಆಡಳಿತಾತ್ಮಕ ವ್ಯವಸ್ಥೆಗಳ ಕೊರತೆಯಿದೆ. ಸಾರ್ವಜನಿಕರ ಅಭಿಪ್ರಾಯವನ್ನು ಸಮರ್ಪಕವಾಗಿ ಸಂಗ್ರಹಿಸದೆ ಗ್ರಾಮಗಳನ್ನು ನೂತನ ತಾಲೂಕಿಗೆ ಸೇರ್ಪಡೆಗೊಳಿಸಿರುವುದರಿಂದ ಗ್ರಾಮೀಣ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಫಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರು ಗ್ರಾಮಗಳ ಜನರು ಹಲವು ವರ್ಷಗಳಿಂದ ವ್ಯಾಪಾರ, ಶಿಕ್ಷಣ, ಆರೋಗ್ಯ ಸೇವೆ, ಸಾರಿಗೆ ಹಾಗೂ ಸರ್ಕಾರಿ ಕೆಲಸಗಳಿಗೆ ಜಾಲಹಳ್ಳಿ ಪಟ್ಟಣವನ್ನೇ ಅವಲಂಬಿಸಿದ್ದಾರೆ. ಜಾಲಹಳ್ಳಿಯೊಂದಿಗೆ ಈ ಗ್ರಾಮಗಳಿಗೆ ಉತ್ತಮ ಸಂಪರ್ಕವಿದ್ದು, ದೈನಂದಿನ ವ್ಯವಹಾರಗಳಿಗೂ ಅನುಕೂಲಕರವಾಗಿದೆ. ಹೀಗಾಗಿ ಈ ಗ್ರಾಮಗಳನ್ನು ದೇವದುರ್ಗ ತಾಲೂಕು ಹಾಗೂ ಜಾಲಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿಯೇ ಮುಂದುವರಿಸುವುದು ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.
ಈ ಸಮಸ್ಯೆಗೆ ಸಂಬಂಧಿಸಿದಂತೆ ಈ ಹಿಂದೆಯೂ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿಗಳು ಅರಕೇರಾ ತಹಸೀಲ್ದಾರರಿಗೆ ಲಿಖಿತ ಸೂಚನೆ ನೀಡಿ, ಸಂಬಂಧಪಟ್ಟ ಗ್ರಾಮಗಳ ನಿವಾಸಿಗಳ ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದರು. ಆದರೆ ಇದುವರೆಗೂ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಆರು ಗ್ರಾಮಗಳಲ್ಲಿ ಪಾರದರ್ಶಕವಾಗಿ ಜನಾಭಿಪ್ರಾಯ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರ ಅಭಿಪ್ರಾಯ ಮತ್ತು ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ, ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಕೈಗೊಂಡಿರುವ ತಾಲೂಕು ವ್ಯಾಪ್ತಿ ಬದಲಾವಣೆಯನ್ನು ಮರುಪರಿಶೀಲಿಸಬೇಕು. ಗ್ರಾಮಸ್ಥರ ನ್ಯಾಯಯುತ ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಫಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರಾದ ಸಿದ್ದನಗೌಡ, ಮೂಡಲಗುಂಡದ ಹನುಮಗೌಡ, ಮದರಕಲ್ನ ರಂಗಣ್ಣ ಕೊಲ್ಕರ್, ಶಿವರಾಜ್ ಮುಂಡರಗಿ, ಹುಸೇನ್ ಸಾಬ್ ಗಣಜಲಿ, ಮಲ್ಲಯ್ಯ ಕಟ್ಟಿಮನಿ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



