ರಾಯಚೂರು: ತಾಲೂಕಿನ ಇಡಪನೂರು ಗ್ರಾಮದಿಂದ ಮೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ₹70 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ ಕಳಪೆ ಕಾಮಗಾರಿ ನಡೆದಿದೆ ಎಂದು ಆರೋಪಿಸಿರುವ ಇಡಪನೂರು ಗ್ರಾಮದ ನಿವಾಸಿ ಯೋಹಾನ್, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಾಮಗಾರಿಯ ಬಿಲ್ ಪಾವತಿಯನ್ನು ತಡೆಹಿಡಿಯುವಂತೆ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025–26ನೇ ಸಾಲಿನ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ಇಡಪನೂರು–ಮೀರಾಪುರ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ₹70 ಲಕ್ಷ ಅನುದಾನ ಬಿಡುಗಡೆಯಾಗಿದೆ. ಲೆಕ್ಕಶೀರ್ಷಿಕೆ 5054ರ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಈ ಕಾಮಗಾರಿಯನ್ನು ಕೆಆರ್‌ಡಿಐಎಲ್ ಸಂಸ್ಥೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮೊಹಮ್ಮದ್ ಸೋಯಿಲ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸತೀಶರೆಡ್ಡಿ ಹಾಗೂ ಗುತ್ತಿಗೆದಾರ ರಾಜೇಶರೆಡ್ಡಿ ಅವರ ಮೇಲ್ವಿಚಾರಣೆಯಲ್ಲಿ ನಿರ್ವಹಿಸಲಾಗಿದೆ ಎಂದು ತಿಳಿಸಿದರು.

ಆದರೆ, ಕಾಮಗಾರಿಯನ್ನು ನಿಗದಿಪಡಿಸಿದ ಸ್ಥಳದಲ್ಲಿ ಕೈಗೊಳ್ಳದೆ ಬೇರೆ ಸ್ಥಳದಲ್ಲಿ ಸೇತುವೆ ನಿರ್ಮಿಸಲಾಗಿದೆ. ಅಲ್ಲದೆ, ಮಂಜೂರಾದ ಅಂದಾಜುಪಟ್ಟಿ ಹಾಗೂ ತಾಂತ್ರಿಕ ನಿಯಮಗಳನ್ನು ಪಾಲಿಸದೆ ಮನಬಂದಂತೆ ಕಾಮಗಾರಿ ನಡೆಸಲಾಗಿದೆ. ನಿರ್ಮಾಣದ ಗುಣಮಟ್ಟವೂ ತೀರಾ ಕಳಪೆಯಾಗಿದ್ದು, ಸಾರ್ವಜನಿಕರ ಹಣ ದುರುಪಯೋಗವಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಆರೋಪಿಸಿದರು.

ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಎರಡು ಬಾರಿ ಲಿಖಿತ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಮಗಾರಿಯ ಗುಣಮಟ್ಟ ಹಾಗೂ ಸ್ಥಳದ ಕುರಿತು ಪರಿಶೀಲನೆ ನಡೆಸಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಹ ಕಾಮಗಾರಿಯ ಕುರಿತು ವಾಸ್ತವಾಂಶಗಳನ್ನು ಪರಿಶೀಲಿಸಿ, ಸೂಕ್ತ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಪತ್ರದ ಮೂಲಕ ಸೂಚಿಸಿದ್ದಾರೆ. ಆದಾಗ್ಯೂ, ಇದುವರೆಗೂ ಯಾವುದೇ ವರದಿ ಸಲ್ಲಿಸದೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ದೂರಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರೂ ಕಾಮಗಾರಿಯನ್ನು ನಿಗದಿತ ಸ್ಥಳದಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸದಿರುವುದು ಗಂಭೀರ ವಿಷಯವಾಗಿದೆ. ಇಂತಹ ಕಾಮಗಾರಿಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಕಾಪಾಡುವುದು ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಇಡಪನೂರು–ಮೀರಾಪುರ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಯ ಕುರಿತು ಸ್ವತಂತ್ರ ತಾಂತ್ರಿಕ ತಂಡದಿಂದ ಸ್ಥಳ ಪರಿಶೀಲನೆ ನಡೆಸಬೇಕು. ಮಂಜೂರಾದ ಅಂದಾಜುಪಟ್ಟಿ, ಕಾಮಗಾರಿ ನಡೆದಿರುವ ಸ್ಥಳ, ಬಳಸಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ವೆಚ್ಚದ ವಿವರಗಳನ್ನು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ತನಿಖೆಯಲ್ಲಿ ಅಕ್ರಮ ಅಥವಾ ಕಳಪೆ ಕಾಮಗಾರಿ ನಡೆದಿರುವುದು ದೃಢಪಟ್ಟಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಕಾಮಗಾರಿಗೆ ಸಂಬಂಧಿಸಿದ ಯಾವುದೇ ಬಿಲ್ ಮಂಜೂರು ಮಾಡಬಾರದು ಎಂದು ಆಗ್ರಹಿಸಿದರು.

ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯವಾಗಲಿದೆ ಎಂದು ಯೋಹಾನ್ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಜಯಸ್ವಾಮಿ, ಸನಾವುಲ್ಲಾ ಹಾಗೂ ನರಸಿಂಹ ರಾಠೋಡ್ ಉಪಸ್ಥಿತರಿದ್ದರು.