ರಾಯಚೂರು, ನ.11: ಆಧುನಿಕ ರಸಾಯನಶಾಸ್ತ್ರದಲ್ಲಿ ಅಣುಗಳ ರಚನೆ, ವಸ್ತುಗಳ ಗುಣಲಕ್ಷಣ ಹಾಗೂ ಅವುಗಳ ಸಂಯೋಜನೆಯನ್ನು ಗುರುತಿಸುವಲ್ಲಿ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ಲತಾ ಎಂ.ಎಸ್. ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ರಸಾಯನಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಯೋಗ ಸಭಾಂಗಣದಲ್ಲಿ ಆಯೋಜಿಸಿದ್ದ ‘ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳ ಮೂಲಭೂತ ತತ್ವಗಳು ಮತ್ತು ಅನ್ವಯಗಳು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳು ವೈಜ್ಞಾನಿಕ ಸಂಶೋಧನೆ ಹಾಗೂ ಪ್ರಯೋಗಾಲಯ ಅಧ್ಯಯನದಲ್ಲಿ ಪ್ರಮುಖ ಸ್ಥಾನ ಪಡೆದಿವೆ. ವಿದ್ಯುತ್ಕಾಂತೀಯ ವಿಕಿರಣ ಮತ್ತು ದ್ರವ್ಯದ ನಡುವಿನ ಪರಸ್ಪರ ಕ್ರಿಯೆಯನ್ನು ಅಧ್ಯಯನ ಮಾಡುವ ಮೂಲಕ ವಸ್ತುಗಳ ರಚನೆ ಹಾಗೂ ಗುಣಲಕ್ಷಣಗಳನ್ನು ವಿಶ್ಲೇಷಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ರಸಾಯನಶಾಸ್ತ್ರದ ವಿದ್ಯಾರ್ಥಿನಿಯರು ಪಠ್ಯಪುಸ್ತಕಗಳ ಅಧ್ಯಯನದ ಜೊತೆಗೆ ಆಧುನಿಕ ವೈಜ್ಞಾನಿಕ ತಂತ್ರಜ್ಞಾನಗಳ ಮೂಲತತ್ವಗಳನ್ನು ಅರಿತುಕೊಳ್ಳಬೇಕು. ಸೈದ್ಧಾಂತಿಕ ಜ್ಞಾನವನ್ನು ಪ್ರಾಯೋಗಿಕ ಅಧ್ಯಯನದೊಂದಿಗೆ ಸಂಯೋಜಿಸಿಕೊಂಡಾಗ ವಿಷಯದ ಕುರಿತು ಹೆಚ್ಚಿನ ತಿಳಿವಳಿಕೆ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣ ಬಸವರಾಜ್ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಇಂತಹ ವಿಶೇಷ ಉಪನ್ಯಾಸಗಳು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮವು ಪ್ರಾರ್ಥನಾಗೀತೆಯೊಂದಿಗೆ ಆರಂಭವಾಯಿತು. ಗಣ್ಯರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಹಾಗೂ ಐಕ್ಯೂಎಸಿ ಸಂಯೋಜಕಿ ಡಾ. ಜ್ಯೋತಿ ಸಿ.ಕೆ. ಮುಖ್ಯ ಭಾಷಣ ಮಾಡಿದರು.

ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ವೆಬ್‌ಸೈಟ್ ಸಂಯೋಜಕಿ ಡಾ. ಅಸ್ಮಾ ಅವರು ಸಂಪನ್ಮೂಲ ವ್ಯಕ್ತಿ ಡಾ. ಲತಾ ಎಂ.ಎಸ್. ಅವರನ್ನು ಪರಿಚಯಿಸಿದರು.

ಇದೇ ಸಂದರ್ಭದಲ್ಲಿ ಡಾ. ಲತಾ ಎಂ.ಎಸ್. ಅವರನ್ನು ಪ್ರಾಂಶುಪಾಲೆ ಡಾ. ಸುಗುಣ ಬಸವರಾಜ್ ಹಾಗೂ ಗಣ್ಯರು ಸನ್ಮಾನಿಸಿ ಗೌರವಿಸಿದರು.

ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ರಶ್ಮಿ ಸ್ವಾಗತಿಸಿದರು. ಆಯಿಷಾ ಅಫಾಫ್ ವಂದಿಸಿದರು. ಸಾನಿಯಾ ಕಾರ್ಯಕ್ರಮ ನಿರೂಪಿಸಿದರು.

ಕಾಲೇಜಿನ ಬೋಧಕ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿನಿಯರ ವೈಜ್ಞಾನಿಕ ಜ್ಞಾನ ವೃದ್ಧಿಸುವುದು ಹಾಗೂ ಸ್ಪೆಕ್ಟ್ರೋಸ್ಕೋಪಿಕ್ ತಂತ್ರಗಳ ಪ್ರಾಯೋಗಿಕ ಅನ್ವಯಗಳ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.