ರಾಯಚೂರು: ಗ್ರಾಮೀಣ ಪ್ರದೇಶಗಳ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಶಿಕ್ಷಣ, ರಸ್ತೆ ಸಂಪರ್ಕ, ಕುಡಿಯುವ ನೀರು ಹಾಗೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಪ್ರತಿಯೊಂದು ಗ್ರಾಮವೂ ಅಭಿವೃದ್ಧಿಯ ಮುಖ್ಯವಾಹಿನಿಗೆ ಬರಬೇಕು. ಗ್ರಾಮೀಣ ಜನರ ದೈನಂದಿನ ಜೀವನಕ್ಕೆ ಅನುಕೂಲವಾಗುವ ಸೌಲಭ್ಯಗಳನ್ನು ಕಲ್ಪಿಸುವುದು ಪ್ರಮುಖ ಉದ್ದೇಶವಾಗಿದೆ. ರಸ್ತೆಗಳಿಂದ ಶಿಕ್ಷಣದವರೆಗೆ, ಮೂಲಸೌಕರ್ಯಗಳಿಂದ ಧಾರ್ಮಿಕ ಕೇಂದ್ರಗಳವರೆಗೆ ಎಲ್ಲ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಗಣಮೂರು ಗ್ರಾಮದಿಂದ ಕಟಕನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ₹1.50 ಕೋಟಿ ವೆಚ್ಚದಲ್ಲಿ ಭೂಮಿಪೂಜೆ ನೆರವೇರಿಸಿದರು. ಈ ರಸ್ತೆ ಕಾಮಗಾರಿಯಿಂದ ಗ್ರಾಮಗಳ ನಡುವಿನ ಸಂಪರ್ಕ ವ್ಯವಸ್ಥೆ ಸುಧಾರಣೆಯಾಗುವ ನಿರೀಕ್ಷೆಯಿದೆ.
ನಾಗನದೊಡ್ಡಿ ಗ್ರಾಮದಲ್ಲಿ ಮಾರೇಮ್ಮ ದೇವಿ ದೇವಸ್ಥಾನದ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು, ₹37.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಎರಡು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ಕೊತ್ತದೊಡ್ಡಿ ಗ್ರಾಮದಲ್ಲಿಯೂ ಮಾರೇಮ್ಮ ದೇವಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.
ಚಂದ್ರಬಂಡಾ ಗ್ರಾಮದಲ್ಲಿ ನಡೆದ ಶ್ರೀ ಬಂಡೆ ರಂಗನಾಥಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು.
ವಡ್ಲಂದೊಡ್ಡಿ ಗ್ರಾಮದಲ್ಲಿ ₹45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮೂರು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ಮಂಡಲಗೇರ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ತರಗತಿ ಕೊಠಡಿಗಳ ಸ್ಥಿತಿಗತಿ ಹಾಗೂ ಶಾಲೆಯಲ್ಲಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಸಿಂಗನೋಡಿ ಗ್ರಾಮದಲ್ಲಿ ಎರಡು ಶಾಲಾ ಕೊಠಡಿಗಳನ್ನು ಉದ್ಘಾಟಿಸಿ, ಹೆಚ್ಚುವರಿಯಾಗಿ ಎರಡು ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಈ ಕಾಮಗಾರಿಗಳಿಗೆ ಒಟ್ಟು ₹60 ಲಕ್ಷ ವೆಚ್ಚ ನಿಗದಿಪಡಿಸಲಾಗಿದೆ. ಇದೇ ಗ್ರಾಮದಲ್ಲಿ ₹25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಸಾರ್ವಜನಿಕ ಬಳಕೆಗೆ ಲೋಕಾರ್ಪಣೆ ಮಾಡಿದರು. ಶ್ರೀ ಧನಮ್ಮ ಹಾಗೂ ಕರೇಮ್ಮ ದೇವಸ್ಥಾನಗಳನ್ನೂ ಉದ್ಘಾಟಿಸಿದರು.
ಬಾಪುರ ಗ್ರಾಮದಲ್ಲಿ ರಸ್ತೆ ಸಂಪರ್ಕ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು, ಬಾಪುರದಿಂದ ಬಾಪುರ ತಾಂಡಾವರೆಗೆ ₹1.20 ಕೋಟಿ ಹಾಗೂ ಬಾಪುರದಿಂದ ಆಂಧ್ರಪ್ರದೇಶ ಗಡಿವರೆಗೆ ₹65 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ₹46.50 ಲಕ್ಷ ವೆಚ್ಚದ ಎರಡು ಶಾಲಾ ಕೊಠಡಿಗಳನ್ನು ಉದ್ಘಾಟಿಸಿ, ಮತ್ತೊಂದು ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಿದರು. ಜೊತೆಗೆ ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಗ್ರಂಥಾಲಯವನ್ನು ಉದ್ಘಾಟಿಸಿದರು. ಕರೇಮ್ಮ ದೇವಸ್ಥಾನ ನಿರ್ಮಾಣ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಿದರು.
ಕಟ್ಲಟ್ಕೂರು ಗ್ರಾಮದಲ್ಲಿ ₹36.13 ಲಕ್ಷ ಅಂದಾಜು ವೆಚ್ಚದ ಎರಡು ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಕುಡಿಯುವ ನೀರಿನ ಪೂರೈಕೆ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದು, ಸುಗಮ ಸಾರಿಗೆ ಸಂಪರ್ಕ ಒದಗಿಸುವುದು ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸಲಾಗುವುದು ಎಂದು ಶಾಸಕ ಬಸನಗೌಡ ದದ್ದಲ್ ತಿಳಿಸಿದರು.



