ರಾಯಚೂರು: ನಗರದ ಹೊರವಲಯದ ವಾರ್ಡ್ ಸಂಖ್ಯೆ 33ರ ಯರಮರಸ್ ಹಳೆ ಗ್ರಾಮದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯಕ್ಕೆ ಸಮರ್ಪಕ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತಾ ಸಿಬ್ಬಂದಿ ಇಲ್ಲದ ಕಾರಣ ಕಟ್ಟಡ ಸಾರ್ವಜನಿಕರ ಬಳಕೆಗೆ ಬಾರದೆ ನಿರುಪಯುಕ್ತವಾಗಿದೆ ಎಂದು ಮಾಜಿ ನಗರಸಭೆ ಸದಸ್ಯ ಶಂಶಾಲಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯರಮರಸ್ ಹಳೆ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹಲವು ವರ್ಷಗಳ ಹಿಂದೆಯೇ ಶೌಚಾಲಯ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡಕ್ಕೆ ಸುಣ್ಣಬಣ್ಣ ಬಳಿಯುವ ಕೆಲಸ ನಡೆದಿದ್ದರೂ, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸದ ಕಾರಣ ಇದುವರೆಗೂ ಸಾರ್ವಜನಿಕರಿಗೆ ಉಪಯೋಗವಾಗುತ್ತಿಲ್ಲ ಎಂದು ದೂರಿದ್ದಾರೆ.
ಶೌಚಾಲಯದಲ್ಲಿ ನಿರಂತರ ನೀರು ಪೂರೈಕೆಯ ವ್ಯವಸ್ಥೆ ಕಲ್ಪಿಸಿಲ್ಲ. ಕಟ್ಟಡದ ಸ್ವಚ್ಛತೆ ಮತ್ತು ನಿರ್ವಹಣೆಗೆ ಪೌರಕಾರ್ಮಿಕರನ್ನೂ ನಿಯೋಜಿಸಿಲ್ಲ. ಇದರಿಂದ ಸಾರ್ವಜನಿಕರು ಶೌಚಾಲಯವನ್ನು ಬಳಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.
ಶೌಚಾಲಯದ ಸುತ್ತಮುತ್ತ ಗಿಡಗಂಟಿಗಳು ಹಾಗೂ ಮುಳ್ಳಿನ ಪೊದೆಗಳು ಬೆಳೆದು ನಿಂತಿವೆ. ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯವೂ ನಡೆದಿಲ್ಲ. ಸಾರ್ವಜನಿಕರ ಅಗತ್ಯಕ್ಕಾಗಿ ನಿರ್ಮಿಸಿದ ಕಟ್ಟಡದ ನಿರ್ವಹಣೆಗೆ ಸಂಬಂಧಪಟ್ಟ ಮಹಾನಗರ ಪಾಲಿಕೆ ಅಧಿಕಾರಿಗಳು ಗಮನಹರಿಸದಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದಲ್ಲದೆ, ವಾರ್ಡ್ನ ವಿವಿಧ ಗಲ್ಲಿಗಳಲ್ಲಿ ಚರಂಡಿಗಳ ಸ್ವಚ್ಛತೆ ಹಾಗೂ ಸಾರ್ವಜನಿಕ ರಸ್ತೆಗಳ ಮೇಲಿನ ಕಸ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ. ಸ್ವಚ್ಛತಾ ಕಾರ್ಯಗಳನ್ನು ನಿಯಮಿತವಾಗಿ ಕೈಗೊಳ್ಳಲು ಅಗತ್ಯ ಸಂಖ್ಯೆಯ ಪೌರಕಾರ್ಮಿಕರನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಯಚೂರು ಮಹಾನಗರ ಪಾಲಿಕೆ ಆಯುಕ್ತರು ಯರಮರಸ್ ಗ್ರಾಮದ ಸಾರ್ವಜನಿಕ ಶೌಚಾಲಯದ ಸ್ಥಿತಿಗತಿಯನ್ನು ಖುದ್ದಾಗಿ ಪರಿಶೀಲಿಸಿ, ನೀರಿನ ಸಂಪರ್ಕ, ಸ್ವಚ್ಛತಾ ಸಿಬ್ಬಂದಿ ಹಾಗೂ ಅಗತ್ಯ ನಿರ್ವಹಣಾ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ಶೌಚಾಲಯವನ್ನು ಶೀಘ್ರವೇ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವುದರ ಜೊತೆಗೆ ವಾರ್ಡ್ನ ಚರಂಡಿ ಮತ್ತು ಕಸ ವಿಲೇವಾರಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮಾಜಿ ನಗರಸಭೆ ಸದಸ್ಯ ಶಂಶಾಲಂ ಆಗ್ರಹಿಸಿದ್ದಾರೆ.



