ರಾಯಚೂರು, ನ.11: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ವಿಶ್ವವಿದ್ಯಾಲಯದ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರುವುದರ ಜೊತೆಗೆ ಪರೀಕ್ಷಾ ಕಾರ್ಯಗಳನ್ನು ತ್ವರಿತವಾಗಿ ಹಾಗೂ ಗುಣಮಟ್ಟದಿಂದ ನಿರ್ವಹಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಮೌಲ್ಯಮಾಪನ ಕುಲಸಚಿವ ಡಾ. ವಿರುಪಾಕ್ಷಯ್ಯ ಡಿಬಿಎಂ ತಿಳಿಸಿದರು.
ನಗರದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಪರೀಕ್ಷಾಂಗ ಕಚೇರಿಯಲ್ಲಿ ಬುಧವಾರ ಕಡತಕ್ಕೆ ಸಹಿ ಹಾಕುವ ಮೂಲಕ ಅವರು ಮೌಲ್ಯಮಾಪನ ವಿಭಾಗದ ಕುಲಸಚಿವರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದ ಸೂಕ್ಷ್ಮಜೀವಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ವಿರುಪಾಕ್ಷಯ್ಯ ಅವರು, ಅಧಿಕಾರ ಸ್ವೀಕಾರದ ಬಳಿಕ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ನೈತಿಕ ಸ್ಥೈರ್ಯ ಬೆಳೆಸುವುದರ ಜೊತೆಗೆ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯ ಪದವಿ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶ್ರಮಿಸಲಾಗುವುದು. ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯ ಸಹಕಾರ ಮತ್ತು ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.
ಹೊಸ ಶಿಕ್ಷಣ ನೀತಿಯ ಆಶಯಗಳಿಗೆ ಅನುಗುಣವಾಗಿ ಪ್ರವೇಶಾತಿ, ಆಡಳಿತ ಹಾಗೂ ಪರೀಕ್ಷಾ ವಿಭಾಗಗಳಲ್ಲಿ ಸಮಗ್ರ ಸುಧಾರಣೆ ತರಲು ಪ್ರಯತ್ನಿಸಲಾಗುವುದು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಆದ್ಯತೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಅವರು ನೂತನ ಮೌಲ್ಯಮಾಪನ ಕುಲಸಚಿವ ಡಾ. ವಿರುಪಾಕ್ಷಯ್ಯ ಅವರನ್ನು ಸ್ವಾಗತಿಸಿ ಅಭಿನಂದಿಸಿದರು.
ಕುಲಸಚಿವ ಡಾ. ಎ. ಚನ್ನಪ್ಪ, ಹಣಕಾಸು ಅಧಿಕಾರಿ ಡಾ. ಸುಯಮೀಂದ್ರ ಕುಲಕರ್ಣಿ, ಉಪಕುಲಸಚಿವ ಡಾ. ಕೆ. ವೆಂಕಟೇಶ, ಶಿಕ್ಷಣ ನಿಕಾಯದ ಡೀನ್ ಪ್ರೊ. ಪಾರ್ವತಿ ಸಿ.ಎಸ್., ವಾಣಿಜ್ಯ ನಿಕಾಯದ ಡೀನ್ ಪ್ರೊ. ಪಿ. ಭಾಸ್ಕರ್, ಕಲಾ ನಿಕಾಯದ ಡೀನ್ ಡಾ. ಲತಾ, ಗ್ರಂಥಪಾಲಕ ಡಾ. ಜಿ.ಎಸ್. ಬಿರಾದಾರ ಸೇರಿದಂತೆ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನೂತನ ಕುಲಸಚಿವರನ್ನು ಸನ್ಮಾನಿಸಿ ಗೌರವಿಸಿದರು.



