ರಾಯಚೂರು, ನ.12: ಬುದ್ಧನ ತತ್ವಗಳು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಮತ್ತು ವೈಚಾರಿಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಸಮಾನತೆ, ಮಾನವೀಯತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಅವರ ವಿಚಾರಧಾರೆಗಳನ್ನು ಅಧ್ಯಯನ ಮಾಡುವುದು ಅಗತ್ಯವಾಗಿದೆ ಎಂದು ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಅಭಿಪ್ರಾಯಪಟ್ಟರು.
ಕಲಬುರಗಿಯ ಪಾಲಿ ಇನ್ಸ್ಟಿಟ್ಯೂಟ್ ಹಾಗೂ ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ವರ್ಷಾಚರಣೆ ಅಂಗವಾಗಿ ಗುರುವಾರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ‘ಬುದ್ಧ ಮತ್ತು ಆತನ ಧಮ್ಮ’ ಕೃತಿ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೈಜ್ಞಾನಿಕ ದೃಷ್ಟಿಕೋನ ಹೊಂದಿರುವ ಪ್ರತಿಯೊಬ್ಬರೂ ಬೌದ್ಧ ಧರ್ಮದ ತತ್ವಗಳನ್ನು ಅಧ್ಯಯನ ಮಾಡಬೇಕು. ಅಂಬೇಡ್ಕರ್ ಅವರು ಬುದ್ಧನ ವಿಚಾರಗಳನ್ನು ಆಳವಾಗಿ ಅಧ್ಯಯನ ಮಾಡಿ, ಅವುಗಳ ಸಾಮಾಜಿಕ ಮಹತ್ವವನ್ನು ಜನಸಾಮಾನ್ಯರಿಗೆ ಪರಿಚಯಿಸಿದ್ದಾರೆ. ‘ಬುದ್ಧ ಮತ್ತು ಆತನ ಧಮ್ಮ’ ಕೃತಿಯು ಕೇವಲ ಬೌದ್ಧ ಧರ್ಮಕ್ಕೆ ಸೀಮಿತವಾಗದೆ ಎಲ್ಲ ಸಮುದಾಯಗಳ ಜನರು ಓದಬೇಕಾದ ಮಹತ್ವದ ಗ್ರಂಥವಾಗಿದೆ. ಇದು ವೈಚಾರಿಕ ಹಾಗೂ ಸಾಮಾಜಿಕ ಪರಿವರ್ತನೆಗೆ ಮಾರ್ಗದರ್ಶಿಯಾಗಿದೆ ಎಂದು ಹೇಳಿದರು.
ಎಲ್ಲ ಧರ್ಮಗಳನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ನಿಜವಾದ ಭಾರತೀಯತೆಯ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಉತ್ತಮ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಬುದ್ಧ ಮತ್ತು ಅಂಬೇಡ್ಕರ್ ಅವರ ಚಿಂತನೆಗಳನ್ನು ಅಧ್ಯಯನ ಮಾಡುವ ಮೂಲಕ ಸಾಮಾಜಿಕ ಪ್ರಜ್ಞೆಯನ್ನು ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಿವಾನಂದ ಕೆಳಗಿನಮನಿ ಮಾತನಾಡಿ, ಬುದ್ಧನ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಭಾರತದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಪರಿಸ್ಥಿತಿಗಳನ್ನು ಆಳವಾಗಿ ಅಧ್ಯಯನ ಮಾಡಿ, ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಚಿಂತನೆಗಳನ್ನು ಅರ್ಥಮಾಡಿಕೊಳ್ಳಲು ಅವರ ಕೃತಿಗಳನ್ನು ಓದುವುದು ಅತ್ಯಗತ್ಯ ಎಂದು ತಿಳಿಸಿದರು.
ವಿಶ್ರಾಂತ ಕುಲಪತಿ ಮಲ್ಲೇಪುರಂ ಜಿ. ವೆಂಕಟೇಶ ಮಾತನಾಡಿ, ಬುದ್ಧನ ತತ್ವಗಳು ವಿವಿಧ ಭಾಷೆಗಳಲ್ಲಿ ವಿಶ್ಲೇಷಣೆಗೆ ಒಳಪಟ್ಟಿವೆ. ಅಂಬೇಡ್ಕರ್ ಅವರು ಬೌದ್ಧ ಸಂಸ್ಕೃತಿ ಮತ್ತು ತತ್ವಶಾಸ್ತ್ರದ ಕುರಿತು ವ್ಯಾಪಕ ಅಧ್ಯಯನ ನಡೆಸಿದ್ದಾರೆ. ಬುದ್ಧನ ಜೀವನ, ಮಹಾಭಿನಿಷ್ಕ್ರಮಣ, ವೈಚಾರಿಕ ಚಿಂತನೆ ಹಾಗೂ ಧಮ್ಮದ ಸ್ವರೂಪದ ಕುರಿತು ಯುವಜನರು ತಿಳಿದುಕೊಳ್ಳಬೇಕು ಎಂದು ಹೇಳಿದರು.
ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ. ಚನ್ನಪ್ಪ ಮಾತನಾಡಿ, ಬುದ್ಧ ಮತ್ತು ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಪರಿಚಯಿಸುವ ಸಾಹಿತ್ಯವನ್ನು ವಿದ್ಯಾರ್ಥಿಗಳು ಹೆಚ್ಚಾಗಿ ಓದಬೇಕು. ಅವರ ವಿಚಾರಗಳ ಕುರಿತು ಶೈಕ್ಷಣಿಕ ವೇದಿಕೆಗಳಲ್ಲಿ ಚರ್ಚೆ ನಡೆಯುವುದರಿಂದ ಯುವಜನರಲ್ಲಿ ಸಾಮಾಜಿಕ ಅರಿವು ಮೂಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಮೌಲ್ಯಮಾಪನ ಕುಲಸಚಿವ ಡಾ. ವಿರುಪಾಕ್ಷಯ್ಯ ಡಿಬಿಎಂ ಮಾತನಾಡಿ, ಅಂಬೇಡ್ಕರ್ ಅವರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ವಿಶ್ವಮಾನವೀಯ ಚಿಂತನೆಯ ಪ್ರತಿನಿಧಿಯಾಗಿ ಪರಿಗಣಿಸಬೇಕು. ಅವರ ವಿಚಾರಗಳು ಇಡೀ ಸಮಾಜಕ್ಕೆ ಸ್ಫೂರ್ತಿದಾಯಕವಾಗಿವೆ ಎಂದು ಹೇಳಿದರು.
ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಜೀಶಾನ್ ಅಖಿಲ್ ಸಿದ್ದಿಖಿ ಮಾತನಾಡಿ, ವಿಶ್ವವಿದ್ಯಾಲಯಗಳು ಮಹನೀಯರ ಜೀವನ, ವ್ಯಕ್ತಿತ್ವ ಮತ್ತು ವಿಚಾರಧಾರೆಗಳ ಕುರಿತು ಮುಕ್ತ ಚರ್ಚೆಗೆ ವೇದಿಕೆಯಾಗಬೇಕು. ‘ಬುದ್ಧ ಮತ್ತು ಆತನ ಧಮ್ಮ’ ಕೃತಿಯು ನೈತಿಕತೆ, ಮಾನವೀಯತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ತಿಳಿಸುವ ಮಹತ್ವದ ಗ್ರಂಥವಾಗಿದೆ ಎಂದು ಅಭಿಪ್ರಾಯಪಟ್ಟರು.
ವಿಚಾರ ಸಂಕಿರಣದ ಮೊದಲ ಗೋಷ್ಠಿಯಲ್ಲಿ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ್ ಅವರು ‘ಬುದ್ಧ ಮತ್ತು ಆತನ ಧಮ್ಮ’ ಕೃತಿಯ ವೈಚಾರಿಕ ಆಶಯಗಳ ಕುರಿತು ವಿಷಯ ಮಂಡಿಸಿದರು.
ಎರಡನೇ ಗೋಷ್ಠಿಯಲ್ಲಿ ಕಲಬುರಗಿಯ ನಿವೃತ್ತ ಪ್ರಾಧ್ಯಾಪಕ ಹಾಗೂ ಅನುವಾದಕ ಡಾ. ಸೂರ್ಯಕಾಂತ ಸುಜ್ಯಾತ್ ಅವರು ಕೃತಿಯ ರಚನಾತ್ಮಕ ಸ್ವರೂಪದ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಉಪಕುಲಸಚಿವ ಡಾ. ಕೆ. ವೆಂಕಟೇಶ, ಹಣಕಾಸು ಅಧಿಕಾರಿ ಡಾ. ಸುಯಮೀಂದ್ರ ಕುಲಕರ್ಣಿ, ಶಿಕ್ಷಣ ನಿಕಾಯದ ಡೀನ್ ಪ್ರೊ. ಪಾರ್ವತಿ ಸಿ.ಎಸ್., ವಾಣಿಜ್ಯ ನಿಕಾಯದ ಡೀನ್ ಪ್ರೊ. ಪಿ. ಭಾಸ್ಕರ್, ಕಲಾ ನಿಕಾಯದ ಡೀನ್ ಡಾ. ಲತಾ ಸೇರಿದಂತೆ ವಿವಿಧ ವಿಭಾಗಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಪಾಲಿ ಇನ್ಸ್ಟಿಟ್ಯೂಟ್ನ ಸಂಚಾಲಕ ಡಾ. ಎಂ.ಬಿ. ಕಟ್ಟಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ರಮೇಶ್ ಅತಿಥಿಗಳನ್ನು ಪರಿಚಯಿಸಿದರು. ಇತಿಹಾಸ ವಿಭಾಗದ ವಿದ್ಯಾರ್ಥಿನಿ ಸ್ನೇಹಾ ಚವ್ಹಾಣ ಪ್ರಾರ್ಥಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕಿ ಸೌಮ್ಯ ಹಾಗೂ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಶ್ಮಿತಾ ಮಾರೇಂ ಕಾರ್ಯಕ್ರಮ ನಿರೂಪಿಸಿದರು. ವಿವಿಧ ವಿಭಾಗಗಳ ಅತಿಥಿ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.



