ಮಾನ್ವಿ: ಶೈಕ್ಷಣಿಕವಾಗಿ ಹಿಂದುಳಿದಿದ್ದ ಮಾನ್ವಿ ತಾಲೂಕಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ಬಿ.ವಿ.ಆರ್. ಕುಟುಂಬದವರು ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ರಾಜಾ ಸುಭಾಶ್ಚಂದ್ರನಾಯಕ ಹೇಳಿದರು.
ಪಟ್ಟಣದ ಬಿ.ವಿ.ಆರ್. ಇ-ಟೆಕ್ನೋ ಶಾಲಾ ಆವರಣದಲ್ಲಿ ಬಿ.ವಿ.ಆರ್. ಎಜ್ಯುಕೇಷನ್ ಟ್ರಸ್ಟ್ ಸಂಸ್ಥಾಪಕರಾದ ಬಿ. ವೀರಾರೆಡ್ಡಿ ಹಾಗೂ ಬಿ. ಜಯಮ್ಮ ಅವರ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಪುಸ್ತಕದ ಜ್ಞಾನವನ್ನು ನೀಡುವುದಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ, ಶಿಸ್ತು ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಅವರನ್ನು ಸಮಾಜದ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಬೇಕು. ಈ ನಿಟ್ಟಿನಲ್ಲಿ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳು ಉತ್ತಮ ಕಾರ್ಯ ನಿರ್ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾನ್ವಿ ತಾಲೂಕು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದ ಸಂದರ್ಭದಲ್ಲಿ ಬಿ. ವೀರಾರೆಡ್ಡಿ ಹಾಗೂ ಬಿ. ಜಯಮ್ಮ ಅವರು ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ, ಈ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಶ್ರಮಿಸಿದ್ದರು. ಅವರ ನಿಧನದ ನಂತರವೂ ಕುಟುಂಬದ ಸದಸ್ಯರು ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಬಿ.ವಿ.ಆರ್. ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಬಿ.ವಿ. ರೆಡ್ಡಿ ಮಾತನಾಡಿ, ನಮ್ಮ ತಂದೆ ಬಿ. ವೀರಾರೆಡ್ಡಿ ಹಾಗೂ ತಾಯಿ ಬಿ. ಜಯಮ್ಮ ಅವರ ಆಶಯದಂತೆ ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಬಡ ವಿದ್ಯಾರ್ಥಿಗಳಿಂದ ಕಡಿಮೆ ಶುಲ್ಕ ಪಡೆಯಲಾಗುತ್ತಿದೆ ಎಂದು ತಿಳಿಸಿದರು.
ಶಾಲೆಯ ಶಿಕ್ಷಕರ ಪರಿಶ್ರಮ, ವಿದ್ಯಾರ್ಥಿಗಳ ನಿರಂತರ ಅಭ್ಯಾಸ ಹಾಗೂ ಪಾಲಕರ ಸಹಕಾರದಿಂದ ಈ ಬಾರಿಯ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ. ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆಯುವ ಮೂಲಕ ಶಾಲೆಯ ವಿದ್ಯಾರ್ಥಿಗಳು ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿ ಸುಖದೇವ ಅವರಿಗೆ ₹1 ಲಕ್ಷ ಮೊತ್ತದ ಚೆಕ್ ನೀಡಿ ಸನ್ಮಾನಿಸಲಾಯಿತು. ದ್ವಿತೀಯ ಸ್ಥಾನ ಪಡೆದ ಸಿದ್ದಾರ್ಥ ಮತ್ತು ಪ್ರಿಯಾ ಹಾಗೂ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಸಿನಿ ಅವರನ್ನು ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಶ್ರಮಿಸಿದ ಶಿಕ್ಷಕರಿಗೂ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಹಿಂದೆ ಶಿಕ್ಷಕರ ಪರಿಶ್ರಮ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಪುಣ್ಯಸ್ಮರಣೆ ಅಂಗವಾಗಿ ಪಟ್ಟಣದ ನೆರಳು ಅನಾಥಾಶ್ರಮದಲ್ಲಿರುವ ವೃದ್ಧರಿಗೆ ಹಾಗೂ ಶ್ರೀ ಚನ್ನಬಸವೇಶ್ವರ ಅಂಧಮಕ್ಕಳ ಶಾಲೆಯ ಮಕ್ಕಳಿಗೆ ವಸ್ತ್ರಗಳನ್ನು ವಿತರಿಸಲಾಯಿತು. ಅಂತರಶಾಲಾ ಮಟ್ಟದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
ಗಿಣಿವಾರ ಹಿರೇಮಠದ ಶ್ರೀ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿದ್ದರು.
ಬಿ.ವಿ.ಆರ್. ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿ ಪದ್ಮಾವತಿ ಬಿ.ವಿ. ರೆಡ್ಡಿ, ಸಹಕಾರ್ಯದರ್ಶಿ ಪ್ರವೀಣ್, ಮುಖ್ಯಗುರು ಸರಮತ್ ಖಾನ್, ವಟಗಲ್ ಶಾರದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಸ್ವಾಮಿ ವಟಗಲ್, ಮಸ್ಕಿಯ ಹೋಲಿಫೇತ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಕೆ.ವಿ. ರೆಡ್ಡಿ, ಸರ್ವೋತ್ತಮ ರೆಡ್ಡಿ, ತುಳಸೆಮ್ಮ, ನರಸಮ್ಮ, ಜಯಮ್ಮ, ಸುಜಾತಮ್ಮ, ಲಕ್ಷ್ಮೀದೇವಮ್ಮ ಸೇರಿದಂತೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.



