ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿ ಅರ್ಚಕರ ಮೇಲೆ ಹಲ್ಲೆ ನಡೆಸಿ, ಪ್ರಾಣಬೆದರಿಕೆ ಹಾಕಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ದೇವಸ್ಥಾನದ ಪಾವಿತ್ರ್ಯತೆ ಕಾಪಾಡುವ ಜೊತೆಗೆ ಅರ್ಚಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಅಖಿಲ ಭಾರತ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ಮಾನ್ವಿ ತಾಲೂಕು ಘಟಕ ಆಗ್ರಹಿಸಿದೆ.

ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ಮಾನ್ವಿ ತಾಲೂಕು ಘಟಕದ ಅಧ್ಯಕ್ಷ ಕಿಡಿಗಣಯ್ಯಸ್ವಾಮಿ, ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ನೀರಮಾನ್ವಿ ಗ್ರಾಮದ ಪ್ರಸಿದ್ಧ ಶಕ್ತಿದೇವತೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ನವೆಂಬರ್ 10ರಂದು ರಾತ್ರಿ 10 ಗಂಟೆ ಸುಮಾರಿಗೆ ಅರ್ಚಕರ ಮೇಲೆ ಹಲ್ಲೆ ನಡೆದಿರುವುದಾಗಿ ಆರೋಪಿಸಿದರು.

ದೇವಸ್ಥಾನದಲ್ಲಿ ಭಕ್ತರಿಗಾಗಿ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದ ಪ್ರಧಾನ ಅರ್ಚಕ ಮಲ್ಲಿಕಾರ್ಜುನ ಪೂಜಾರಿ ಹಾಗೂ ಸಹ ಅರ್ಚಕರಾದ ವೀರಬಸವ ಮತ್ತು ಸುನೀಲ್ ಅವರೊಂದಿಗೆ ಗ್ರಾಮದ ನಿವಾಸಿಗಳಾದ ಗಂಗಣ್ಣ ನಾಯಕ, ಶರಣಬಸವ ಹಾಗೂ ವೀರೇಶ ಎಂಬುವವರು ಅನುಚಿತವಾಗಿ ವರ್ತಿಸಿದ್ದಾರೆ. ಮದ್ಯಪಾನ ಮಾಡಿ ದೇವಸ್ಥಾನಕ್ಕೆ ಆಗಮಿಸಿದ ಅವರು ಪೂಜೆಗೆ ಅಡ್ಡಿಪಡಿಸುವುದರ ಜೊತೆಗೆ ಅರ್ಚಕರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ, ಅರ್ಚಕರಿಗೆ ಪ್ರಾಣಬೆದರಿಕೆ ಹಾಕುವ ಮೂಲಕ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ. ಈ ಘಟನೆಯಿಂದ ದೇವಸ್ಥಾನದ ಅರ್ಚಕರು ಹಾಗೂ ಭಕ್ತರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಕಿಡಿಗಣಯ್ಯಸ್ವಾಮಿ ತಿಳಿಸಿದರು.

ದೇವಸ್ಥಾನಗಳು ಭಕ್ತರ ಧಾರ್ಮಿಕ ನಂಬಿಕೆ ಹಾಗೂ ಶ್ರದ್ಧೆಯ ಕೇಂದ್ರಗಳಾಗಿವೆ. ಇಂತಹ ಪವಿತ್ರ ಸ್ಥಳಗಳಲ್ಲಿ ಪೂಜಾ ಕಾರ್ಯಗಳಿಗೆ ಅಡ್ಡಿಪಡಿಸುವುದು ಮತ್ತು ಅರ್ಚಕರ ಮೇಲೆ ಹಲ್ಲೆ ನಡೆಸುವುದು ಖಂಡನೀಯ. ಅರ್ಚಕರು ಯಾವುದೇ ಭಯವಿಲ್ಲದೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವಂತಹ ಸುರಕ್ಷಿತ ವಾತಾವರಣ ನಿರ್ಮಿಸುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದೇವಸ್ಥಾನದ ಆವರಣದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಸಹ ಅರ್ಚಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು.

ಅರ್ಚಕರ ಸುರಕ್ಷತೆ ಹಾಗೂ ದೇವಸ್ಥಾನದ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮತ್ತು ತಾಲೂಕು ಆಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ. ಮಲ್ಲಪ್ಪ ಹೂಗಾರ್, ಜಗದೀಶಯ್ಯ ಸ್ವಾಮಿ ಮಲ್ಲನಮಡುಗು, ದೊಡ್ಡಪ್ಪ ಹೂಗಾರ, ವೀರಭದ್ರಯ್ಯಸ್ವಾಮಿ ಸಂಗಪೂರು, ವೆಂಕೋಬರಾವ್ ದೇಸಾಯಿ, ಚನ್ನಬಸಯ್ಯ, ಮುದ್ದಯ್ಯಸ್ವಾಮಿ, ಪಂಪಣ್ಣ ಪೂಜಾರಿ, ಉದಯ ಪೂಜಾರಿ, ರಾಮು ನೀರಮಾನ್ವಿ, ನಾಗರಾಜ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.