ಲಿಂಗಸುಗೂರು: ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ ಜನರ ಮನೆ 'ಬಾಗಿಲಿಗೆ ಆಡಳಿತ' ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಂದು ಸಾರ್ವಜನಿಕರ ಮನವಿಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ತ್ವರಿತವಾಗಿ ಅರ್ಜಿಗಳ ವಿಲೇವಾರಿ ಮಾಡಲಾಗುವುದು ಮತ್ತು ಪರಿಹಾರದ ಮಾಹಿತಿಯನ್ನು ಅರ್ಜಿದಾರರಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು. ಸಪ್ಟೆಂಬರ್ 19ರ ಶನಿವಾರ ದಂದು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆಯಗಳ ಸಹಯೋಗದೊಂದಿಗೆ ಪ್ರಜಾಸೇವಾ ಆಂದೋಲನ ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಿ, ಅವರ ಮನೆಬಾಗಿಲಿಗೇ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಪ್ರಜಾಸೇವಾ ಆಂದೋಲನ’ ಕಾರ್ಯಕ್ರಮವು ಲಿಂಗಸುಗೂರು ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಪ್ರಜಾಸೇವಾ ಆಂದೋಲನವು ಸತತ ಮೂರನೇ ಶನಿವಾರವೂ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಯಶಸ್ವಿಯಾಗಿ ಮುಂದುವರಿಯುತ್ತಿದೆ. ಲಿAಗಸುಗೂರು ತಾಲೂಕು ವ್ಯಾಪ್ತಿಯಲ್ಲಿ ತೀವ್ರ ಬರಗಾಲ ಆವರಿಸಿದ್ದು, ಈಗಾಗಲೇ ಸರಕಾರದಿಂದ ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆಯಾಗಿದೆ. ಬರ ಪರಿಹಾರಕ್ಕಾಗಿ ಬೆಳೆ ಕಟಾವು ಪ್ರಯೋಗಗಳು ಹಾಗೂ ಇತರ ಸಂಬAಧಿತ ಪರಿಹಾರ ಕಾರ್ಯಗಳನ್ನು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ನಡೆಯುತ್ತಿವೆ ಎಂದು ತಿಳಿಸಿದರು.
ಲಿಂಗಸುಗೂರು ಭಾಗದಲ್ಲಿ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಆರ್ಡಿಪಿಆರ್ ,ಪೊಲೀಸ್ ಇಲಾಖೆ, ವಿದ್ಯಾರ್ಥಿನಿಲಯಗಳು ಸೇರಿದಂತೆ ವಿವಿಧ ಹಲವು ಇಲಾಖೆಗಳಿಗೆ ಸಂಬAಧಿಸಿದAತೆ ಸಾರ್ವಜನಿಕ ಮತ್ತು ವೈಯಕ್ತಿಕ ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಪ್ರತಿಯೊಂದು ಸಮಸ್ಯೆಯನ್ನು ಸಾರ್ವಜನಿಕರು ಈ ಆಂದೋಲನ ಕಾರ್ಯಕ್ರಮದ ಮೂಲಕ ನಮಗೆ ಸಲ್ಲಿಸಬೇಕು ಎಂದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಈ ಹಿಂದೆ ಮಾನ್ವಿ ತಾಲೂಕಿನಲ್ಲಿ ಅಭಿಯಾನ ನಡೆಸಿದ ನಂತರ, ಇಂದು ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಉನ್ನತಾಧಿಕಾರಿಗಳು ಲಿಂಗಸುಗೂರು ತಾಲೂಕಿನಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಮತ್ತು ಸಮಸ್ಯೆಗಳಿಗೆ ಸ್ಪಂದಿಸಲು ಆಗಮಿಸಿದ್ದಾರೆ. "ಲಿಂಗಸುಗೂರು ತಾಲೂಕಿನಲ್ಲಿ ಒಟ್ಟು 30 ಗ್ರಾಮ ಪಂಚಾಯಿತಿಗಳಿದ್ದು, ದೇಶ ಪ್ರಸಿದ್ಧ ಹಟ್ಟಿ ಚಿನ್ನದ ಗಣಿ ಹಾಗೂ ಜಲಧಾರೆ ಯೋಜನೆಯ ಮುಖ್ಯ ಘಟಕಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಜಲಧಾರೆ ಯೋಜನೆಯಡಿ ಜಿಲ್ಲೆಯ 1,400ಕ್ಕೂ ಹೆಚ್ಚು ವಸತಿ ಪ್ರದೇಶಗಳು ಮತ್ತು 7 ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರು ಪೂರೈಸುವ 'ಡಬ್ಲ್ಯೂಟಿಪಿ' ಮತ್ತು ಮುಖ್ಯ ಮೂಲಗಳು ಲಿಂಗಸುಗೂರಿನಲ್ಲಿವೆ ಎಂದರು.
ತಾಲೂಕಿನಲ್ಲಿ ಆರೋಗ್ಯ, ಅಪೌಷ್ಟಿಕತೆ ಮತ್ತು ಕುಡಿಯುವ ನೀರಿನ ಸಮಸ್ಯೆಗಳು ಹೆಚಾಗಿವೆ. ಅದರಲ್ಲೂ ವಿಶೇಷವಾಗಿ ಈ ಬಾರಿ ಮಳೆ ಅಭಾವದಿಂದ ಬರ ಪೀಡಿತ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಂಚಾಯಿತಿ ಮಟ್ಟದಲ್ಲಿ ಪರಿಶೀಲಿಸಿದಾಗ ಹಲವಾರು ಸಮಸ್ಯೆಗಳು ಬೆಳಕಿಗೆ ಬಂದಿವೆ. ಸಾರ್ವಜನಿಕರ ಅರ್ಜಿಗಳು ಮತ್ತು ಕುಂದುಕೊರತೆಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಅಹವಾಲನ್ನು ಗಂಭೀರವಾಗಿ ಪರಿಗಣಿಸಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲೇ ಪರಿಹರಿಸಬಹುದಾದ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲಾಗುವುದು. ಸರ್ಕಾರದ ಮಟ್ಟದಲ್ಲಿ ಬಗೆಹರಿಯಬೇಕಾದ ವಿಷಯಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಇತ್ಯರ್ಥಪಡಿಸಲಾಗುವುದು ಎಂದರು.
ಈ ವೇಳೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಮಾತನಾಡಿ, ಸರ್ಕಾರ ಎಂದರೆ ಕೇವಲ ಒಂದೆಡೆ ಕುಳಿತು ಅಧಿಕಾರ ನಡೆಸುವುದಲ್ಲ, ಬದಲಾಗಿ ಜನರ ಕುಂದುಕೊರತೆಗಳನ್ನು ಆಲಿಸಿ, ಅವರ ಆಶೋತ್ತರಗಳನ್ನು ಈಡೇರಿಸುವುದು ಮುಖ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜನರ ಸಮಸ್ಯೆಗೆ ಮನೆಬಾಗಿಲಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ 'ಪ್ರಜಾಸೇವಾ' ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದರು.
1ನೇ ಮತ್ತು 3ನೇ ಶನಿವಾರ ದಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯದೊಂದಿಗೆ ಆಯಾ ಹೋಬಳಿಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮಂಗಳೂರಿನಲ್ಲಿ ಸಚಿವ ಸಂಪುಟ ಕಾರ್ಯಕ್ರಮ ಇರುವ ಕಾರಣ ಜಿಲ್ಲಾ ಉಸ್ತುವಾರಿ ಸಚಿವರು ಬಂದಿರುವುದಿಲ್ಲ.
2ನೇ ಮತ್ತು 4ನೇ ಶನಿವಾರ ದಂದು ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದರು.
ಸಾರ್ವಜನಿಕರು ದೀರ್ಘಕಾಲದಿಂದ ಬಗೆಹರಿಯದೆ ಉಳಿದಿರುವ ತಮ್ಮ ವಿವಿಧ ಇಲಾಖೆಗಳ ಕುಂದುಕೊರತೆಗಳು ಹಾಗೂ ಸಮಸ್ಯೆಗಳ ಕುರಿತು ಕೌಂಟರ್ಗಳಲ್ಲಿ ಅಹವಾಲುಗಳನ್ನು/ಅರ್ಜಿಗಳನ್ನು ಸಲ್ಲಿಸಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಸ್ಥಳದಲ್ಲೇ ನಿರ್ಧಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಉನ್ನತಾಧಿಕಾರಿಗಳು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದರು.
ರೈತರಿಗೆ ವಿವಿಧ ಕೃಷಿ ಸಲಕರಣೆಗಳ ವಿತರಣೆ: ಪ್ರಜಾಸೇವಾ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯಿಂದ ಅರ್ಹ ರೈತರಿಗೆ ಕ್ರಿಮಿ ನಾಶಕ ಸಿಂಪಡಿಸುವ ಮಿಷನ್, ಹೊಲ ಬಿತ್ತನೆ ಸಾಮಾಗ್ರಿಗಳು, ರೂಟರ್, ನೀರಿನ ಪೈಪ್ ಸೇರಿದಂತೆ ವಿವಿಧ ಸಲಕರಣೆಗಳನ್ನು ವಿತರಣೆ ಮಾಡಲಾಯಿತು. ಇದಕ್ಕೂ ಮುಂಚೆ ವೇದಿಕೆ ಮೇಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆಯ ವಿವಿಧ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ಲಿಂಗಸುಗೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪ್ರಜಾಸೇವಾ ಆಂದೋಲನ ಸಭೆಯ ಅಂಗವಾಗಿ ವಿವಿಧ ಇಲಾಖೆಯಗಳ ಸಹಯೋಗದೊಂದಿಗೆ ಸ್ಥಾಪಿಸಲಾಗಿದ್ದ ವಿವಿಧ ಮಳಿಗೆಗಳಿಗೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಭೇಟಿ ನೀಡಿದರು. ವಿವಿಧ ಇಲಾಖೆಗಳಾದ ಆಹಾರ, ಆಗ್ನಿ ಶಾಮಕದಳ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆ, ಆರೋಗ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಖಜಾನೆ, ಅಬಕಾರಿ ಇಲಾಖೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪಶುಪಾಲನೆ ಇಲಾಖೆ, ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವನಿಧಿ, ಉಪ ನೋಂದಣಿ ಕಚೇರಿ ಲಿಂಗಸುಗೂರು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಭೂಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಳಿಗೆಗಳನ್ನು ಸ್ಥಾಪಿಸಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲ ಸಿದ್ದಪ್ಪ ಪೂಜಾರಿ, ಲಿಂಗಸುಗೂರು ಸಹಾಯಕ ಆಯುಕ್ತ ನಾಗೇಂದ್ರ ಬಾಬು ಕುಮಾರ್, ಲಿಂಗಸುಗೂರು ತಹಶಿಲ್ದಾರ್ ಸತ್ಯಮ್ಮ, ಆಹಾರ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ನಂದಿತಾ ಎಮ್.ಎನ್., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವ್ಹಾಣ್, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ವೆಂಕಟೇಶ ಗುತ್ತೇದಾರ, ಜಿಲ್ಲಾ ಉದ್ಯೋಗಾಧಿಕಾರಿ ನವೀನ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುರೇಶ ಜಿ., ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರ, ಅಬಕಾರಿ ಇಲಾಖೆಯ ಉಪ ನಿರೀಕ್ಷಕಿ ಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸರಸ್ವತಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಹಾಗೂ ಲಿಂಗಸುಗೂರಿನ ಪಟ್ಟಣದ ಸಾರ್ವಜನಿಕರು ಉಪಸ್ಥಿತರಿದ್ದರು.



