ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ, ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಶಿವಾನಂದ ತಗಡೂರು ಅವರಿಗೆ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಪ್ರದಾನ ಮಾಡಿ ಗೌರವಿಸಿದರು.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಾನಂದ ತಗಡೂರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರಂಗಭೂಮಿ ಕಲಾವಿದರು ಹಾಗೂ ರಂಗಕರ್ಮಿಗಳಿಗೆ ರಾಜ್ಯ ನಾಟಕ ಅಕಾಡೆಮಿಯ ವಾರ್ಷಿಕ ಮತ್ತು ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಉಮಾಶ್ರೀ, “ರಂಗಭೂಮಿ ಯಾವ ಕಾಲಕ್ಕೂ ತನ್ನ ಜೀವಂತಿಕೆಯನ್ನು ಕಳೆದುಕೊಳ್ಳುವುದಿಲ್ಲ. ನಾನೂ ರಂಗಭೂಮಿ ಕಲಾವಿದೆಯಾಗಿ ಬೆಳೆದು ಈ ಎತ್ತರದ ಸ್ಥಾನಕ್ಕೆ ಬಂದಿದ್ದೇನೆ. ರಂಗಭೂಮಿಯ ಮೂಲಕ ಬೆಳೆದು ಬಂದಿರುವ ಎಲ್ಲ ಕಲಾವಿದರಿಗೂ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆಗಳು” ಎಂದು ಹೇಳಿದರು.
ರಂಗಭೂಮಿ ಸಮಾಜದ ಬದುಕು, ಸಂಸ್ಕೃತಿ ಹಾಗೂ ಜನರ ಭಾವನೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಶಕ್ತಿಶಾಲಿ ಮಾಧ್ಯಮವಾಗಿದೆ. ಹಲವು ಪ್ರತಿಭಾವಂತರನ್ನು ಸಮಾಜಕ್ಕೆ ಪರಿಚಯಿಸುವುದರ ಜೊತೆಗೆ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಕೆಲಸವನ್ನು ರಂಗಭೂಮಿ ಮಾಡುತ್ತಿದೆ ಎಂಬ ಅಭಿಪ್ರಾಯವೂ ಸಮಾರಂಭದಲ್ಲಿ ವ್ಯಕ್ತವಾಯಿತು.
ಸಮಾರಂಭದಲ್ಲಿ ಹಿರಿಯ ನಟ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು, ರಾಜ್ಯ ನಾಟಕ ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ. ನಾಗರಾಜಮೂರ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್, ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ವಸುಂಧರಾ, ರಿಜಿಸ್ಟ್ರಾರ್ ನೀಲಮ್ಮ, ಶೇಖ್ ಮಾಸ್ತರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.



