ತುಂಗಾ ಬಿಂಬ/ಸಿರವಾರ: ಸಾಕ್ಷರತೆ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕವೇ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯ. ಸಾಕ್ಷರತೆ ಹೆಚ್ಚಳ, ಬಡತನ ನಿರ್ಮೂಲನೆ, ಸಾಮಾಜಿಕ ಸಮಾನತೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ತಹಶೀಲ್ದಾರ್ ಅಶೋಕ ಪವಾರ್ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶಕ್ಕೆ ಆಗಸ್ಟ್ 15 ಸ್ವಾತಂತ್ರ್ಯ ದಿನದ ಸಂಭ್ರಮವಾದರೆ, ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಸೆಪ್ಟೆಂಬರ್ 17 ವಿಶೇಷ ದಿನವಾಗಿದೆ. ಭಾರತ ಸ್ವಾತಂತ್ರ್ಯ ಪಡೆದ 13 ತಿಂಗಳು 2 ದಿನಗಳ ಬಳಿಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೃಢ ನಿರ್ಧಾರ ಮತ್ತು ಕ್ರಮದಿಂದ ಈ ಭಾಗವು ನಿಜಾಮರ ಆಡಳಿತದಿಂದ ಮುಕ್ತವಾಯಿತು ಎಂದು ಸ್ಮರಿಸಿದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸರ್ಕಾರ ಸಂವಿಧಾನದ 371(ಜೆ) ಅಡಿಯಲ್ಲಿ ವಿಶೇಷ ಸೌಲಭ್ಯ ಮತ್ತು ಅನುದಾನ ಒದಗಿಸುತ್ತಿದೆ. ವಿದ್ಯಾರ್ಥಿಗಳು ಮತ್ತು ಯುವಕರು ಈ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸದೃಢರಾಗಬೇಕು. ವಿಶೇಷವಾಗಿ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮವಾಗಿ ತಯಾರಿ ನಡೆಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಜಿ ಚೌದ್ರಿ, ಉಪಾಧ್ಯಕ್ಷೆ ಲಕ್ಷ್ಮಿ ಆದೆಪ್ಪ, ಮುಖ್ಯಾಧಿಕಾರಿ ಜಗನ್ನಾಥ ಜೋಶಿ, ತಾಲೂಕು ಪಂಚಾಯಿತಿ ಇಒ ಮಂಜುನಾಥ ಜಾವೂರು, ಸಿಪಿಐ ಎಂ. ಶಶಿಕಾಂತ, ನೀರಾವರಿ ಇಲಾಖೆಯ ಎಇಇ ವಿಜಯಲಕ್ಷ್ಮಿ ಪಾಟೀಲ, ಪಟ್ಟಣ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.