ತುಂಗ ಬಿಂಬ/ರಾಯಚೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಸೆ.19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಕನ್ನಡ ನಾಡು-ನುಡಿ ಹಾಗೂ ಕನ್ನಡಿಗರ ಹಿತಾಸಕ್ತಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಬಿನ್ನವತ್ತಳೆಯನ್ನು ಸಲ್ಲಿಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ವಿನೋದರೆಡ್ಡಿ ಎಂ. ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕೋಣನಕುಂಟೆ ಕ್ರಾಸ್ನಲ್ಲಿರುವ ಪ್ರೆಸ್ಟೀಜ್ ಸಭಾಂಗಣದಲ್ಲಿ ಸಂಜೆ 5.30ಕ್ಕೆ ಸಮಾರಂಭ ನಡೆಯಲಿದೆ. ರಾಜ್ಯದ ಕನ್ನಡಿಗರ ಪರವಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ, ಕನ್ನಡ ಭಾಷೆ, ನೆಲ, ಜಲ ಹಾಗೂ ಕನ್ನಡಿಗರ ಹಕ್ಕು ಮತ್ತು ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಹುಕ್ಕೇರಿ ಶ್ರೀ ಗುರು ಶಾಂತೇಶ್ವರ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಷ.ಬ್ರ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.
ನಾಡೋಜ ಡಾ. ಹಂಪ ನಾಗರಾಜಯ್ಯ ಸೇರಿದಂತೆ ರಾಜ್ಯದ ವಿವಿಧ ಕ್ಷೇತ್ರಗಳ ಗಣ್ಯರು, ಸಚಿವರು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷ್ಣಭೈರೇಗೌಡ, ಎನ್. ಚಲುವರಾಯಸ್ವಾಮಿ, ಎಸ್. ಮಧು ಬಂಗಾರಪ್ಪ, ಡಾ. ಹಿ.ಚಿ. ಬೋರಲಿಂಗಯ್ಯ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಕೆ.ಎಂ. ಶಿವಲಿಂಗೇಗೌಡ, ಹೆಚ್.ಸಿ. ಬಾಲಕೃಷ್ಣ, ರಿಜ್ವಾನ್ ಅರ್ಷದ್ ಹಾಗೂ ಎನ್.ಎ. ಹ್ಯಾರಿಸ್ ಸೇರಿದಂತೆ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.
ಸಮಾರಂಭದ ಮತ್ತೊಂದು ವಿಶೇಷತೆಯಾಗಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ 17 ಸಾಧಕರಿಗೆ ‘ಕರ್ನಾಟಕ ಸಾರ್ವಭೌಮ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಗುವುದು. ಚಲನಚಿತ್ರ ಹಾಗೂ ರಂಗಭೂಮಿ ಕಲಾವಿದ ದೊಡ್ಡಣ್ಣ, ರಾಯಚೂರು ಜಿಲ್ಲೆಯ ಕೃಷಿ ಸಾಧಕಿ ಕವಿತಾ ಮಿಶ್ರ, ಗಾಯಕಿ ಕಸ್ತೂರಿ ಶಂಕರ್, ಯು.ಟಿ. ಖಾದರ್ ಫರೀದ್, ಪ್ರಾಧ್ಯಾಪಕಿ, ಲೇಖಕಿ ಹಾಗೂ ಸಂಘಟಕಿ ಡಾ. ಪದ್ಮಿನಿ ನಾಗರಾಜ, ಉದ್ಯಮಿ ಹಾಗೂ ಸಮಾಜಸೇವಕ ಬಾಬು ವೈಟ್ ಗೋಲ್ಡ್ ಮತ್ತು ಡಿ.ಎಸ್. ಮ್ಯಾಕ್ಸ್ ಪ್ರಾಪರ್ಟೀಸ್ ಪ್ರೈ.ಲಿ. ನಿರ್ದೇಶಕ ಎಸ್.ಪಿ. ದಯಾನಂದ ಸೇರಿದಂತೆ ಒಟ್ಟು 17 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿನೋದರೆಡ್ಡಿ ವಿವರಿಸಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಈ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲೆಯೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದೆ. ತಮ್ಮ ನೇತೃತ್ವದಲ್ಲಿ ಜಿಲ್ಲೆಯ ನೂರಾರು ಕರವೇ ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳು ಬೆಂಗಳೂರಿಗೆ ತೆರಳಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಸ್. ವೆಂಕಟೇಶ, ದಿವ್ಯಾ ಎಂ. ರೆಡ್ಡಿ, ಲಕ್ಷ್ಮಿ, ಎಂ.ಎಸ್. ಮದನಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.



